ಡಾ.ಹಂಪನಾಗೆ ಸೇಡಿಯಾಪು ಪ್ರಶಸ್ತಿ

ಉಡುಪಿ, ಮೇ 31: ಕನ್ನಡದ ಖ್ಯಾತ ವಿದ್ವಾಂಸ ಹಂಪ ನಾಗರಾಜಯ್ಯ (ಹಂಪನಾ) ಅವರಿಗೆ 2018ನೇ ಸಾಲಿನ ಸೇಡಿಯಾಪು ಕೃಷ್ಣ ಭಟ್ಟ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾ ಶಾಸ್ತ್ರ, ಕಥನ ಕಾವ್ಯ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಯು 10,000 ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳ ಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.8ರಂದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಹಂಪನಾ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಹಂಪ ನಾಗರಾಜಯ್ಯ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರು ತಾಲೂಕಿನ ಹಂಪಸಂದ್ರ ಹಳ್ಳಿಯಲ್ಲಿ ಜನಿಸಿ ಹಂಪಸಂದ್ರ, ಗೌರೀಬಿದನೂರು, ಮಂಡ್ಯ, ಮಧುಗಿರಿ ಶಾಲೆಗಳಲ್ಲಿ ಆರಂಭಿಕ ಶಿಕ್ಷಣವನ್ನು ಪಡೆದು ತುಮಕೂರು ಸರಕಾರಿ ಪ್ರಥಮದರ್ಜೆ ಕಾಲೇಜಿ ನಲ್ಲಿ ಇಂಟರ್ ಮೀಡಿಯೆಟ್ ಶಿಕ್ಷಣ ಪೂರೈಸಿದರು. ಮೈಸೂರು ವಿವಿಯಲ್ಲಿ ಕನ್ನಡ ಎಂ.ಎ.ಪದವಿ ಪಡೆದರು. ವಿದ್ವಾಂಸ ರಂ.ಶ್ರೀ.ಮುಗಳಿ ಅವರ ಮಾರ್ಗ ದರ್ಶನದಲ್ಲಿ ‘ವಡ್ಡಾರಾಧನೆ: ಸಮಗ್ರ ಅಧ್ಯಯನ’ ವಿಷಯದ ಕುರಿತು ಸಂಶೋಧನ ಪ್ರಬಂಧವನ್ನು ಮಂಡಿಸಿ ಬೆಂಗಳೂರು ವಿವಿಯಿಂದ ಡಾಕ್ಟರೇಟ್ ಪಡೆದರು.
ಮೈಸೂರಿನ ಮಹಾರಾಣಿ ಕಾಲೇಜಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿ ಅನಂತರ ಮಂಡ್ಯ, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಸರಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸಿದರು. ಬೆಂಗಳೂರು ವಿವಿ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿ, ನಿರ್ದೇಶಕರಾಗಿ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾಗಿ, ಕನ್ನಡ-ಸಂಸ್ಕೃತಿ ಇಲಾಖೆ ಹಾಗೂ ಜೈನ ಸಂಶೋಧನ ಸಂಸ್ಥೆಯ ನಿರ್ದೇಶಕರಾಗಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಅಧ್ಯಕ್ಷರಾಗಿ ನಾಡುನುಡಿಯ ಮುನ್ನಡೆಗಾಗಿ ಅಪಾರ ಸೇವೆ ಸಲ್ಲಿಸಿದರು.
ಹಂಪನಾ ನೂರಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ರಚಿಸಿದ್ದಾರೆ. ಭಾಷಾವಿಜ್ಞಾನ, ಜನಪದ, ಅನುವಾದ, ಕಾದಂಬರಿ, ಪ್ರಬಂಧ, ಶಿಶುಸಾಹಿತ್ಯ, ಕಾವ್ಯ, ವಿಮರ್ಶೆ, ಜೀವನಚರಿತ್ರೆ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಹಂಪನಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಿಶುಸಾಹಿತ್ಯ ರಾಷ್ಟ್ರೀಯ ಪ್ರಶಸ್ತಿ, ಚಾವುಂಡರಾಯ ಪುರಸ್ಕಾರ, ಕಾವ್ಯಾನಂದ ಪ್ರಶಸ್ತಿ, ಪಂಪಪ್ರಶಸ್ತಿ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ.







