ಡಿಕೆಶಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ
ಬೆಂಗಳೂರು, ಮೇ 31: ಡಿ.ಕೆ. ಶಿವಕುಮಾರ್ ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಉಪಮುಖ್ಯಮಂತ್ರಿ(ಡಿಸಿಎಂ) ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಎಸ್.ಬಾಲರಾಜ ಗೌಡ ಒತ್ತಾಯಿಸಿದ್ದಾರೆ.
ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಮೇಶ್ವರ್‌ಗೆ ಡಿಸಿಎಂ ಸ್ಥಾನ ನೀಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಡಿ.ಕೆ.ಶಿವಕುಮಾರ್‌ಗೆ ಡಿಸಿಎಂ ಸ್ಥಾನ ನೀಡದಿದ್ದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರಕ್ಕೆ ಹೆಚ್ಚು ದಿನ ಭವಿಷ್ಯವಿಲ್ಲ ಎಂದರು.
ಉಪಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಾ.ಪರಮೇಶ್ವರ್ ದಲಿತ ಎನ್ನುವ ಕಾರಣಕ್ಕೆ ನನಗೆ ಡಿಸಿಎಂ ಸ್ಥಾನ ನೀಡಿಲ್ಲ. ಪಕ್ಷಕ್ಕೆ ನಾನು ಸಲ್ಲಿಸಿದ ಸೇವೆ ಪರಿಗಣಿಸಿ ಈ ಸ್ಥಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡಾ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಡಿಸಿಎಂ ಸ್ಥಾನವನ್ನು ಏಕೆ ನೀಡಿಲ್ಲ ಎಂದು ಪ್ರಶ್ನಿಸಿದರು.
ಕಳೆದ ಹಲವಾರು ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದಾರೆ. ಪಕ್ಷ ಸಂಕಷ್ಟಕ್ಕೆ ಸಿಲುಕಿದ ಸಂದರ್ಭಗಳಲ್ಲಿ ಕಾಪಾಡಿದ್ದು, ಸಮ್ಮಿಶ್ರ ಸರಕಾರ ರಚನೆಯ ವೇಳೆ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗದಂತೆ ನೋಡಿಕೊಂಡಿದ್ದಾರೆ. ಹೀಗಾಗಿ, ಅವರಿಗೆ ಡಿಸಿಎಂ ಸ್ಥಾನ ನೀಡಿ, ಶಿವಕುಮಾರ್ ಸೇವೆಗೆ ತಕ್ಕ ಗೌರವ ನೀಡಬೇಕು ಎಂದು ಒತ್ತಾಯಿಸಿದರು.







