ಕಬ್ಬಿನ ಬಾಕಿ ಕೊಡಿಸಲು ಕಟ್ಟುನಿಟ್ಟಿನ ಕ್ರಮ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜೂ. 2: ರಾಜ್ಯದ ಕಬ್ಬು ಬೆಳೆಗಾರರಿಗೆ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆ ಮಾಲಕರು ತಕ್ಷಣವೇ ಬಾಕಿ ಮೊತ್ತವನ್ನು ಕೊಡಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಶನಿವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳು ರೈತರಿಗೆ 1,500 ಕೋಟಿ ರೂ.ಗಳಷ್ಟು ಕಬ್ಬಿನ ಬಾಕಿ ಕೊಡಬೇಕಿದೆ. ಈಗಾಗಲೇ ಅಧಿಕಾರಿಗಳು ಸಕ್ಕರೆ ಕಾರ್ಖಾನೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ಹಣ ಕೊಡಿಸಲು ಕ್ರಮ ವಹಿಸಬೇಕೆಂದು ಸೂಚಿಸಿದ್ದೇನೆ ಎಂದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿದೆ. ಇದರಿಂದ ಸಕ್ಕರೆ ಕಾರ್ಖಾನೆಗಳ ಮಾಲಕರಿಗೂ ಸಮಸ್ಯೆಯಾಗಿದ್ದು, ಕಬ್ಬು ಬೆಳೆಯವ ರೈತರಿಗೆ ಅನ್ಯಾಯವಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಗುಜರಾತ್ ಮಾದರಿಯಲ್ಲೆ ಕಬ್ಬು ಬೆಳೆಗಾರರಿಗೆ ಉತ್ತಮ ದರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಕಬ್ಬಿನ ಉಪ ಉತ್ಪನ್ನಗಳತ್ತ ಗಮನಹರಿಸಲಾಗುವುದು ಎಂದ ಅವರು, ಕಬ್ಬಿನ ಬಾಕಿ ಮೊತ್ತವನ್ನು ಕೂಡಲೇ ಕಾರ್ಖಾನೆ ಮಾಲಕರು ರೈತರಿಗೆ ನೀಡಬೇಕು ಎಂದು ಇದೇ ವೇಳೆ ಅವರು ತಾಕೀತು ಮಾಡಿದರು.







