ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಎಬಿವಿಪಿಯಿಂದ ಪ್ರತಿಭಟನೆ

ಶಿವಮೊಗ್ಗ, ಜೂ. 4: ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಣೆ ಮಾಡಲು ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯು ಸೋಮವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದ ನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಅರ್ಪಿಸಿತು.
ಈ ಹಿಂದಿನ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಿತ್ತು. ಇದರಿಂದ ಆ ವರ್ಗದ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ - ಆರ್ಥಿಕವಾಗಿ ಸಾಕಷ್ಟು ಅನುಕೂಲವಾಗಿತ್ತು.
ಹಾಲಿ ರಾಜ್ಯ ಸರ್ಕಾರವು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡುವುದಾಗಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಪ್ರಸ್ತುತ ಶಾಲಾ - ಕಾಲೇಜುಗಳು ಆಋಂಭವಾಗಿದ್ದು, ತಕ್ಷಣವೇ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರಸ್ತುತ ಶೈಕ್ಷಣಿಕ ಕ್ಷೇತ್ರ ವಾಣಿಜ್ಯೀಕರಣಗೊಳ್ಳುತ್ತಿದೆ. ಹಣವಿಲ್ಲದೆ ಶಿಕ್ಷಣ ಪಡೆಯುವುದು ದುಸ್ತರ ಎಂಬ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ವಿಪರೀತ ಮಟ್ಟಕ್ಕೆ ತಲುಪಿದೆ. ಇದರಿಂದ ಬಡ, ಮಧ್ಯಮ, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದೇ ದುಸ್ತರವಾಗಿ ಪರಿಣಮಿಸಿದೆ.
ಈ ಎಲ್ಲ ಕಾರಣದಿಂದ ಹಾಗೂ ಗ್ರಾಮೀಣ ವರ್ಗದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಉಚಿತ ಬಸ್ ಪಾಸ್ ನೀಡುವ ವ್ಯವಸ್ಥೆ ಕಾರ್ಯಗತಗೊಳಿಸಬೇಕು. ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ಸಂಘಟನೆ ಆಗ್ರಹಿಸಿದೆ.







