ಎಚ್‌ಡಿಕೆ ಸರಕಾರ ರಚಿಸಲು ಆಹ್ವಾನಿಸಿದ್ದ ರಾಜ್ಯಪಾಲರ ಕ್ರಮ ರದ್ದುಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ
ಬೆಂಗಳೂರು, ಜೂ.7: ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸರಕಾರ ರಚಿಸಲು ಆಹ್ವಾನಿಸಿದ್ದ ರಾಜ್ಯಪಾಲರ ಕ್ರಮ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಲಾಗಿದೆ.
ಧಾರವಾಡ ಮೂಲದ ವಕೀಲ ನಾಮದೇವ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78 ಮತ್ತು ಜೆಡಿಎಸ್ 38 ಎಂಎಲ್‌ಎ ಸ್ಥಾನಗಳನ್ನು ಗಳಿಸಿವೆ. ಹೀಗಾಗಿ ಕರ್ನಾಟಕದ ಜನತೆಯು 104 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಸರಕಾರ ರಚನೆಯಾಗಬೇಕು ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಹಾಗೆಯೇ, ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ತಿರಸ್ಕರಿಸಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಆದರೆ, ಬಿಜೆಪಿಗೆ ಜನಾದೇಶವಿದ್ದರೂ, ಚುನಾವಣೆಯಲ್ಲಿ ತಿರಸ್ಕರಿಸಲ್ಪಟ್ಟ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಅಸ್ತಿತ್ವ ಹಾಗೂ ಗುರುತಿಗಾಗಿ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದವು. ಮೈತ್ರಿ ಸರಕಾರದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿತ್ತು. ಆ ಮನವಿ ಮೇರೆಗೆ ರಾಜ್ಯಪಾಲರು ಮೇ 18ರಂದು ಸರಕಾರ ರಚಿಸಲು ಕುಮಾರಸ್ವಾಮಿಗೆ ಆಹ್ವಾನ ಮಾಡಿದ್ದರು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಜನಾದೇಶದ ವಿರುದ್ಧವಾಗಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲು ಆಹ್ವಾನ ನೀಡಿದ್ದ ರಾಜ್ಯಪಾಲರ ಕ್ರಮವು ಪ್ರಜಾತಂತ್ರ ವ್ಯವಸ್ಥೆಯ ಸಿದ್ಧಾಂತಗಳನ್ನು ಅಸ್ಥಿರಗೊಳಿಸುವಂತಿದೆ. ಸಂವಿಧಾನದ ಸಾರ್ವಭೌಮತ್ವಕ್ಕೆ ಧಕ್ಕೆ ತಂದಿದೆ. ಕರ್ನಾಟಕದ ಜನತೆಯ ಜನಾದೇಶದ ವಿರುದ್ಧವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಿದಂತಿದೆ ಎಂದು ದೂರಿದೆ.
ಹೀಗಾಗಿ, ಸಂವಿಧಾನದ ಸೌರ್ವಭೌಮತ್ವವನ್ನು ಎತ್ತಿಹಿಡಿಯುವ ಸಲುವಾಗಿ ಸರಕಾರ ರಚಿಸಲು ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ ಮತ್ತು ಅವರನ್ನು ಮುಖ್ಯಮಂತ್ರಿಯಾಗಿ ನಿಯೋಜಿದ ರಾಜ್ಯಪಾಲರ ಕ್ರಮ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಅಲ್ಲದೆ, ಅರ್ಜಿ ಇತ್ಯರ್ಥವಾಗುವರೆಗೆ ಕುಮಾರಸ್ವಾಮಿ ಅವರನ್ನು ಸರಕಾರ ರಚಿಸಲು ಆಹ್ವಾನಿಸಿದ ಮತ್ತು ಅವರನ್ನು ಮುಖ್ಯಮಂತ್ರಿಯಾಗಿ ನಿಯೋಜಿಸಿದ ರಾಜ್ಯಪಾಲರ ಕ್ರಮವನ್ನು ಅಮಾನತ್ತಿನಲ್ಲಿಡಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.







