ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ: ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸಲಹೆ

ಮಡಿಕೇರಿ, ಜೂ.7: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ ಮರಳಿ ಶಾಲೆಗೆ ಸೇರ್ಪಡೆ ಮಾಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆಂದೋಲನ ಮಾದರಿಯಲ್ಲಿ ವಿಶೇಷ ಅಭಿಯಾನ ಆಯೋಜಿಸುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸಲಹೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕ ವ್ಯಾಪ್ತಿಯ ಕಾರ್ಯಕ್ರಮಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸುಮಾರು 21 ಮಕ್ಕಳು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಮಾಹಿತಿ ಇದ್ದು, ಈ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಕಂದಾಯ, ಸಾರ್ವಜನಿಕ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಈ ಸಂಬಂಧ ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಅವರು ಮಡಿಕೇರಿ ತಾಲೂಕಿನಲ್ಲಿ ಮೂವರು, ಸೋಮವಾರಪೇಟೆ ತಾಲೂಕಿನಲ್ಲಿ 12 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 6, ಒಟ್ಟು 21 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಇವರಲ್ಲಿ ಮಡಿಕೇರಿ ತಾಲೂಕಿನ ಒಬ್ಬ ವಿದ್ಯಾರ್ಥಿ ಮರಳಿ ಶಾಲೆಗೆ ಸೇರ್ಪಡೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಇಲ್ಲದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ದುಡಿಮೆಗೆ ದೂಡಬಾರದು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಬೈಸಿಕಲ್ ವಿತರಣೆ, ಹೆಣ್ಣು ಮಕ್ಕಳು ಪ್ರತಿನಿತ್ಯ ಶಾಲೆಗೆ ಹಾಜರಾಗುವಂತಾಗಲು ಪ್ರೋತ್ಸಾಹಧನ ಹೀಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇವುಗಳನ್ನು ಬಳಸಿಕೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಬಗ್ಗೆ ವರದಿಗಳು ಕೇಳಿಬರುತ್ತಿದ್ದು, ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕಿದೆ. ಗ್ರಾಮ ಪಂಚಾಯತ್ ಮೂಲಕ ನಡೆಯುವ ಗ್ರಾಮಸಭೆ ಹಾಗೂ ಮಕ್ಕಳ ಗ್ರಾಮಸಭೆ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಇರುವ ಕಾನೂನಾತ್ಮಕ ಹಕ್ಕುಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಬಾಲ್ಯ ವಿವಾಹ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ವರದಿಯಾಗುತ್ತವೆ. ಇನ್ನೂ ಕೆಲವು ವರದಿಯಾಗುವುದಿಲ್ಲ. ಆದ್ದರಿಂದ ಈ ಬಗ್ಗೆ ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಬಾಲ್ಯ ವಿವಾಹ ಸಂಬಂಧಿಸಿದಂತೆ 2016-17 ಮತ್ತು 2017-18 ರಲ್ಲಿ ಒಟ್ಟು 5 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 4 ಪ್ರಕರಣಗಳನ್ನು ತಡೆಯಲಾಗಿದೆ. ಒಂದು ಸುಳ್ಳು ಪ್ರಕರಣವೆಂದು ತಿಳಿದುಬಂದಿದೆ ಎಂದು ಮಮ್ತಾಜ್ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯಡಿ 2017-18 ರಲ್ಲಿ 4 ಪ್ರಕರಣಗಳು ವರದಿಯಾಗಿದ್ದು, ಈ ನಾಲ್ಕು ಮಕ್ಕಳಿಗೆ ಬಾಲಕರ ಮತ್ತು ಬಾಲಕಿಯರ ಬಾಲ ಮಂದಿರದಲ್ಲಿ ಪುನರ್ವಸತಿ ಕಲ್ಪಿಸಿ ವಿದ್ಯಾಭ್ಯಾಸ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ 2013 ರಿಂದ ಇದುವರೆಗೆ 178 ಪೋಕ್ಸೋ ಪ್ರಕರಣಗಳು ವರದಿಯಾಗಿದ್ದು, 64 ಪ್ರಕರಣಗಳು ವಿಚಾರಣಾ ಹಂತದಲ್ಲಿವೆ. 85 ಪ್ರಕರಣಗಳು ಖುಲಾಸೆಗೊಂಡಿವೆ. 7 ಪ್ರಕರಣಗಳು ವಜಾಗೊಂಡಿದ್ದು, 22 ಪ್ರಕರಣಗಳಿಗೆ ಶಿಕ್ಷೆಯಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಅವರು ವಿವರಿಸಿದರು. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ವಜಾಗೊಂಡಿರುವ 7 ಪ್ರಕರಣ ಸಂಬಂಧಿಸಿದಂತೆ ಮರು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಬೇಕು. ಮಕ್ಕಳು ಕಾಣೆಯಾಗಲು ಕಾರಣವೇನು ಎಂಬ ಬಗ್ಗೆ ಮಾಹಿತಿ ಒದಗಿಸಬೇಕು. ಜೊತೆಗೆ ಎಷ್ಟು ವರ್ಷದ ಮಕ್ಕಳು ಕಾಣೆಯಾಗುತ್ತಿದ್ದಾರೆ ಎಂಬ ಬಗ್ಗೆ ಅವಲೋಕನ ಮಾಡಬೇಕಿದೆ ಎಂದು ಅವರು ಸೂಚಿಸಿದರು.
2016 ಮತ್ತು 2017 ನೇ ವರ್ಷದಲ್ಲಿ ಒಟ್ಟು 121 ಮಕ್ಕಳು ಕಾಣೆಯಾಗಿದ್ದು, ಇವರಲ್ಲಿ 38 ಗಂಡು ಮತ್ತು 83 ಹೆಣ್ಣು ಮಕ್ಕಳು ಕಾಣೆಯಾಗಿದ್ದರು. ಇವರಲ್ಲಿ 36 ಗಂಡು ಮತ್ತು 78 ಹೆಣ್ಣು ಒಟ್ಟು 114 ಮಕ್ಕಳು ಪತ್ತೆಯಾಗಿದ್ದಾರೆ. ಉಳಿದಂತೆ 7 ಮಕ್ಕಳು ಪತ್ತೆಯಾಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೆಸ್ವಾಮಿ ಅವರು ವಿವರಿಸಿದರು. ಕೊಡಗು ಜಿಲ್ಲಾ ಬಾಲ ನ್ಯಾಯ ಮಂಡಳಿಗೆ 26 ಪ್ರಕರಣಗಳು ಬಂದಿದ್ದು, 22 ಪ್ರಕರಣಗಳು ಇತ್ಯರ್ಥಗೊಂಡಿವೆ. 4 ಪ್ರಕರಣಗಳು ಬಾಕಿ ಇವೆ ಎಂದು ಅವರು ಮಾಹಿತಿ ನೀಡಿದರು.
ಕಚೇರಿಗಳಲ್ಲಿ 10 ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಲ್ಲಿ. ಅಂತಹ ಕಚೇರಿಗಳಲ್ಲಿ ಮಹಿಳೆಯರು ತಮ್ಮ ದೂರುಗಳನ್ನು ದಾಖಲಿಸಲು ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಒತ್ತು ನೀಡಬೇಕಿದೆ. ಮಹಿಳೆಯರು ಮತ್ತು ಮಕ್ಕಳಲ್ಲಿನ ಹಕ್ಕುಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯ ಎಂದು ಅವರು ತಿಳಿಸಿದರು.
ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ಮಾತನಾಡಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸಂಸ್ಥೆ, ವಿಶೇಷ ಪಾಲನೆ ಮತ್ತಿತರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್, ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಜಗದೀಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುಳಾ, ಪೌರಾಯುಕ್ತರಾದ ಬಿ.ಶುಭಾ, ವಕೀಲರಾದ ಮೀನಾ ಕುಮಾರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಮಕ್ಕಳ ವಿಶೇಷ ಪೊಲೀಸ್ ಘಟಕದ ಸುಮತಿ ಇತರರು ಹಲವು ಮಾಹಿತಿ ನೀಡಿದರು.
ತಹಶೀಲ್ದಾರರಾದ ಶಾರದಾಂಭ, ಬಾಡ್ಕರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಳಾದ ದಮಯಂತಿ, ಮಹೇಶ, ಸೀತಾಲಕ್ಷ್ಮಿ, ಒಡಿಪಿ ಸಂಸ್ಥೆಯ ಜಾಯ್ಸ್ ಮೇನೆಜಸ್, ಸಾಂತ್ವನಾ ಕೇಂದ್ರ ಸಮಾಲೋಚಕರಾದ ಚಂದ್ರಮ್ಮ, ಕಾವೇರಮ್ಮ, ಮಕ್ಕಳ ಸಹಾಯವಾಣಿ ಕೇಂದ್ರದ ನವೀನ್ ಇತರರು ಹಲವು ಮಾಹಿತಿ ನೀಡಿದರು.







