ಅಸಮಾಧಾನ ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ, ಜೂ. 8: ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರಿಗೆ ಅಸಮಾಧಾನ ಇರುವುದು ನಿಜ. ಇದೆಲ್ಲಾ ಸಹಜ. ಆದರೆ, ಇದೆನ್ನಲ್ಲ ಬದಿಗಿಟ್ಟು ಪಕ್ಷಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಮಧ್ಯೆ ಗುಂಪುಗಾರಿಕೆ ನಡೆಯುತ್ತಿದೆ ಎಂಬುದು ಸತ್ಯಕ್ಕೆ ದೂರ. ಅವರಿಬ್ಬರದ್ದು ಭಿನ್ನ ದಾರಿ ಎಂಬುದು ಕೇವಲ ಊಹಾಪೋಹ ಎಂದು ಅಲ್ಲಗಳೆದರು.
ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆಯಾಗಿದೆ. ಜಾತ್ಯತೀತ ತತ್ವ ಮತ್ತು ಪ್ರಜಾಪ್ರಭುತ್ವ ರಕ್ಷಣೆ ದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕೆಂದು ಕೋರಿದ ಅವರು, ಅಸಮಾಧಾನಕ್ಕೆ ಯಾರೂ ಬಿಸಿತುಪ್ಪ ಸುರಿಯುವುದು ಬೇಡ. ಎಲ್ಲರೂ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷಕ್ಕಾಗಿ ಶ್ರಮಿಸಬೇಕು ಎಂದರು.
ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು. ವರಿಷ್ಠರ ಸೂತ್ರ ಪಾಲನೆ ನಮ್ಮೆಲ್ಲರ ಕರ್ತವ್ಯ ಎಂದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಸರಕಾರ ಐದು ವರ್ಷ ಉತ್ತಮ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಖಚಿತ. ಎರಡೂ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸುವ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಜಾತ್ಯತೀತ ತತ್ವ ಎತ್ತಹಿಡಿದು, ಪ್ರಜಾಪ್ರಭುತ್ವ, ಸಂವಿಧಾನ ಉಳಿಸಲು ಒಗ್ಗಟ್ಟನಿಂದ ಹೋಗುತ್ತೇವೆ’
-ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಕಾಂಗ್ರೆಸ್ ನಾಯಕ







