ರಾಜ್ಯದ ರಾಜಕೀಯ ಪರಿಸ್ಥಿತಿ ಹಾಸ್ಯಾಸ್ಪದ: ಕೇಂದ್ರ ಸಚಿವ ಅನಂತಕುಮಾರ್ ವ್ಯಂಗ್ಯ

ಬೆಂಗಳೂರು, ಜೂ. 8: ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಪರಿಸ್ಥಿತಿ ಆಯೋಮಯ ಮತ್ತು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ವ್ಯಂಗ್ಯವಾಡಿದರು.
ಶುಕ್ರವಾರ ನಗರದ ವಾಣಿವಿಲಾಸ ರಸ್ತೆಯಲ್ಲಿರುವ ಸರಸ್ವತಿ ವಿದ್ಯಾ ಮಂದಿರದಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರಕಾರ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಖಾತೆ ರಹಿತ 25 ಮಂತ್ರಿಗಳನ್ನು ನೀಡಿದೆ. ರಾಜ್ಯದ ಜನರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದರೂ ಕೂಡಾ ಜೆಡಿಎಸ್ ಮತ್ತು ಕಾಂಗ್ರೆಸ್ ಹಿಂಬಾಗಿಲಿನಿಂದ ಅಧಿಕಾರ ಹಿಡಿದಿವೆ ಎಂದು ತಿಳಿಸಿದರು.
ಈಗಾಗಲೆ ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್‌ನಲ್ಲಿ ಭಿನ್ನಮತಗಳು ಪ್ರಾರಂಭಗೊಂಡಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯಾಡಳಿತವನ್ನು ಸುಲಲಿತವಾಗಿ ನಡೆಸುವುದು ಕಷ್ಟವಾಗಲಿದೆ ಎಂಬುದು ರಾಜ್ಯದ ಜನತೆ ಈಗಾಗಲೇ ಸ್ಪಷ್ಟವಾಗಿದೆ. ಹೀಗಾಗಿ ರಾಜ್ಯದ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಪ್ರಬುದ್ದ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಆಶೀರ್ವದಿಸಲಿದ್ದಾರೆ ಎಂದು ಅವರು ಅಭಿಪ್ರಾಯಿಸಿದರು.





