ಬೆಂಗಳೂರು: ಬಸ್‌ಪಾಸ್ ವಿತರಿಸಲು ಆಗ್ರಹಿಸಿ ಪ್ರತಿಭಟನೆ
ಬೆಂಗಳೂರು, ಜೂ.9: ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವಂತೆ ಆಗ್ರಹಿಸಿ ‘ಭಾರತೀಯ ವಿದ್ಯಾರ್ಥಿ ಫೆಡರೇಷನ್’(ಎಸ್‌ಎಫ್‌ಐ)ನ ಕಾರ್ಯಕರ್ತರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಶನಿವಾರ ನಗರದ ಮಲ್ಲೇಶ್ವರಂನ 18ನೇ ಕ್ರಾಸ್‌ನ ಬಿಎಂಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಜಮಾಯಿಸಿದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟಿಸಿ, ಈ ಕೂಡಲೇ ಉಚಿತ ಬಸ್‌ಪಾಸ್ ವಿತರಿಸಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಸಂಘಟನೆಯ ಸಂಚಾಲಕ ಪ್ರಕಾಶ್ ಮಾತನಾಡಿ, ಕಾಲೇಜುಗಳು ಆರಂಭಗೊಂಡಿದ್ದರೂ ಸಹ ಬಸ್‌ಪಾಸ್ ವಿತರಿಸಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ದಿನಕ್ಕೆ ನೂರಾರು ರೂಪಾಯಿ ಹಣ ನೀಡಿ ಪ್ರಯಾಣಿಸಬೇಕಿದೆ. ಇನ್ನು, ಕೆಲ ಬಡ ವಿದ್ಯಾರ್ಥಿಗಳು ಬಸ್ ಟಿಕೆಟ್ ಖರೀದಿಸಲು ಆಗದೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ, ಪಾಸ್‌ಗಳನ್ನು ವಿತರಿಸಬೇಕೆಂದು ಮನವಿ ಮಾಡಿದರು.
ರಾಜ್ಯ ಸರಕಾರ ಈ ಕೂಡಲೇ ಎಚ್ಚೆತ್ತುಕೊಂಡು ಬಸ್‌ಪಾಸ್ ವಿತರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಹಲವಾರು ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.





