ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಹಾಜರಾತಿಗೆ ಬಯೋಮೆಟ್ರಿಕ್

ಸಾಂದರ್ಭಿಕ ಚಿತ್ರ
ಬೆಂಗಳೂರು, ಜೂ.11: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ ಮೇಲೆ ನಿಗಾ ಇಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಶಿಕ್ಷಣ ಇಲಾಖೆ ಬಯೋಮೆಟ್ರಿಕ್ ಯಂತ್ರ ಅಳವಡಿಕೆಗೆ ನಿರ್ಧರಿಸಿದ್ದು, ಅಳವಡಿಕೆ ಕಾರ್ಯ ಚುರುಕುಗೊಳಿಸಿದೆ.
ಶಿಕ್ಷಕರು ಶಾಲೆಗಳಲ್ಲಿ ಪಾಠ ಮಾಡುವುದನ್ನು ಬಿಟ್ಟು ರಾಜಕೀಯ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೀಗಾಗಿ ಶಾಲೆಯಲ್ಲಿ ಬಯೋಮೆಟ್ರಿಕ್ ಯಂತ್ರ ಅಳವಡಿಸಲು ಮುಂದಾಗಿದ್ದೇವೆ ಎಂದು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಬಯೋಮೆಟ್ರಿಕ್ ವ್ಯವಸ್ಥೆ ಜಾರಿ ಮಾಡುವುದರಿಂದ ಸ್ಥಳೀಯ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳಿಗೆ ಶಿಕ್ಷಕರ ಹಾಜರಾತಿಯ ಬಗ್ಗೆ ಮಾಹಿತಿ ಸಿಗುತ್ತದೆ. ಇದರಿಂದ ಶಿಕ್ಷಣದ ಗುಣಮಟ್ಟವೂ ಹೆಚ್ಚಳವಾಗಲಿದೆ ಎಂದು ಅವರು ಹೇಳಿದರು.
ಪೋಷಕರಿಂದ ಖಾಸಗಿ ಶಾಲೆಗಳಲ್ಲಿ ಹಣ ವಸೂಲಿ ಕುರಿತು ಅನೇಕ ದೂರುಗಳು ಕೇಳಿಬಂದಿವೆ. ಹೀಗಾಗಿ, ಶಿಕ್ಷಣ ಇಲಾಖೆ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚುವರಿ ಶುಲ್ಕ, ಡೊನೇಶನ್ ಪಡೆಯುವ ಖಾಸಗಿ ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸೂಚಿಸಿದ್ದೇವೆ.
ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಸರಕಾರದ ಆದೇಶ ಪಾಲಿಸದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದ ಅವರು, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು. ಜೂ.16ರ ನಂತರ ವರ್ಗಾವಣೆಗೆ ಚಾಲನೆ ದೊರೆಯಲಿದೆ. ಉಚಿತ ಪಠ್ಯಪುಸ್ತಕ ವಿತರಣೆ ಕಾರ್ಯ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ವಿವರಿಸಿದರು.







