ಬೆಂಗಳೂರು ನೀಲ ನಕ್ಷಾ ಕ್ರಿಯಾ ತಂಡ ಹಿಂಪಡೆಯಲು ಸರಕಾರ ಚಿಂತನೆ ನಡೆಸಿದೆ: ಎ.ಎಸ್.ಪೊನ್ನಣ್ಣ
ಬೆಂಗಳೂರು, ಜೂ.11: ಬೆಂಗಳೂರು ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆ ಸೂಚನೆ ನೀಡಲು ಬೆಂಗಳೂರು ನೀಲ ನಕ್ಷಾ ಕ್ರಿಯಾ ತಂಡ ರಚಿಸುವ ಉದ್ದೇಶದಿಂದ ಹಿಂದೆ ಸರಿಯಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಬೆಂಗಳೂರು ನೀಲನಕ್ಷಾ ಕ್ರಿಯಾ ತಂಡ ರಚನೆ ಪ್ರಶ್ನಿಸಿ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಮತ್ತು ನಮ್ಮ ಬೆಂಗಳೂರು ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಈ ಅಂಶವನ್ನು ಮನವರಿಕೆ ಮಾಡಿಕೊಡಲಾಗಿದೆ.
ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಈ ಕುರಿತಂತೆ ನ್ಯಾಯಪೀಠಕ್ಕೆ ವಿವರಿಸಿ, ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಅವರು ಬೆಂಗಳೂರು ನೀಲನಕ್ಷಾ ಕ್ರಿಯಾ ತಂಡ ರಚನೆ ಉದ್ದೇಶ ಹಿಂಪಡೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇದೇ 12ರಂದು ಕೋರ್ಟ್‌ಗೆ ಮೆಮೊ(ಜ್ಞಾಪನಾ ಪತ್ರ) ಸಲ್ಲಿಸಲಾಗುವುದು ಎಂದು ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಜೂ. 12ಕ್ಕೆ ಮುಂದೂಡಲಾಗಿದೆ.





