ಮಕ್ಕಳ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜೂ.13: ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 5ರಿಂದ 18 ವರ್ಷದೊಳಗಿನ ಮಕ್ಕಳನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದ್ದು, 2018ನೆ ಸಾಲಿನ ರಾಷ್ಟ್ರಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರತಕ್ಕದ್ದು. ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು ಅಗತ್ಯ. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ.
2018ನೆ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇಲ್ಲಿಂದ ಪಡೆದು, ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜೂ.30ರ ಒಳಗೆ ತಲುಪುವಂತೆ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಗೆ ಕಳುಹಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಈ ರಾಷ್ಟ್ರ ಮಟ್ಟದ ಪ್ರಶಸ್ತಿಯು ಒಂದು ಚಿನ್ನದ ಪದಕ, ರೂ.20 ಸಾವಿರ ರೂ. ನಗದು, ರೂ.10ಸಾವಿರ ರೂ. ಮೌಲ್ಯದ ಪುಸ್ತಕ ವೋಚರ್ ಮತ್ತು ಪ್ರಶಸ್ತಿ ಪತ್ರ ಹಾಗೂ 35 ಬೆಳ್ಳಿ ಪದಕ (ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ) 10ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.







