ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು, ಜೂ.18: ಮುಸ್ಲಿಮ್ ಸಮುದಾಯದ ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡಬೇಕು ಎಂದು ವಕ್ಫ್ ಸಲಹಾ ಸಮಿತಿ ಅಧ್ಯಕ್ಷರುಗಳ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕ್ಫ್ ಸಮಿತಿಯ ಹಬೀಬ್ ಉಲ್ಲಾ, ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಶೇ.90 ರಷ್ಟು ಮುಸ್ಲಿಮ್ ಸಮುದಾಯದ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿ ಮತಚಲಾಯಿಸಿದ್ದಾರೆ. ಅದರ ಭಾಗವಾಗಿ 79 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಹಿಂದಿನ ಸರಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಪ್ ಇಲಾಖೆಗಳಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿ ಅಪಾರವಾದ ಆಯವ್ಯಯವನ್ನು ಬಳಕೆ ಮಾಡಿದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಆದರೆ, ನೂತನ ಮಂತ್ರಿಮಂಡಲದಲ್ಲಿ ಮುಸ್ಲಿಮ್ ಸಮುದಾಯದ ಕೇವಲ ಇಬ್ಬರಿಗೆ ಅವಕಾಶ ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ವಿರುದ್ಧವಾಗಿ ತನ್ವೀರ್ ಸೇಠ್ ಪರಿಣಾಮಕಾರಿಯಾದ ನಾಯಕತ್ವವನ್ನು ವಹಿಸಿಕೊಂಡಿದ್ದರು. ಅಲ್ಲದೆ, ಅವರು ರಾಜ್ಯ ಯುವ ಅಲ್ಪಸಂಖ್ಯಾತ ನಾಯಕರಾಗಿದ್ದಾರೆ ಹಾಗೂ ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿದ್ದ ವೇಳೆ ಉತ್ತಮ ಆಡಳಿತ ನೀಡಿದ್ದಾರೆ. ಅವರಿಗೆ ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯವಿದೆ ಎಂದು ಅವರು ತಿಳಿಸಿದರು.
ಮುಂದಿನ ವರ್ಷ ರಾಜ್ಯದಲ್ಲಿ ಪಾರ್ಲಿಮೆಂಟ್ ಚುನಾವಣೆಗಳು ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ. ಹೀಗಾಗಿ, ಕೂಡಲೇ ಮುಸ್ಲಿಮ್ ಸಮುದಾಯದ ನಾಯಕ ತನ್ವೀರ್ ಸೇಠ್‌ರ ಅನುಭವ ಮತ್ತು ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಮುಂದಿನ ಚುನಾವಣೆಯಲ್ಲಿ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.







