ಹನೂರು: ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

ಹನೂರು,ಜೂ.27: ರೈತರು ಕೃಷಿ ಇಲಾಖೆಯ ಮಾರ್ಗದರ್ಶನ ಪಡೆದುಕೊಂಡು ಕೃಷಿಯಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಲುವುದರ ಮೂಲಕ ಹೆಚ್ಚಿನ ಇಳುವರಿಯನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಜಿಪಂ ಸದಸ್ಯ ಬಸವರಾಜು ತಿಳಿಸಿದರು.
ಹನೂರು ತಾಲೂಕಿನ ರಾಮಾಪುರದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಅರಣ್ಯ ಹಾಗೂ ಇನ್ನಿತರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ಧ ಸಮಗ್ರ ಕೃಷಿ ಅಭಿಯಾನದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. 'ರೈತರು ದೇಶದ ಬೆನ್ನೆಲುಬಾಗಿದ್ದು, ಜನತೆಗೆ ಅನ್ನದಾತರಾಗಿದ್ದಾರೆ. ಹಾಗಾಗಿ ರೈತರು ಅಭಿವೃದ್ಧಿ ಹೊಂದಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಹಲವು ಸವಲತ್ತುಗಳನ್ನು ನೀಡುತ್ತಿದೆ. ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸುವ ಸಲುವಾಗಿ ಕೃಷಿ ಇಲಾಖೆಯ ವತಿಯಿಂದ ಕಳೆದ 2 ದಿನಗಳ ಕಾಲ ವಾಹನದ ಮೂಲಕ ರಾಮಪುರ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗಿದೆ. ಈ ಪ್ರಚಾರ ಕಾರ್ಯಕ್ರವನ್ನು ರೈತ ಬಂಧುಗಳು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರದ ವತಿಯಿಂದ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ವ್ಯವಸ್ಥೆಯಾಗಬೇಕು ಮತ್ತು ಸಕಾಲದಲ್ಲಿ ಒದಗಿಸುವುದರ ಜೊತೆಗೆ ಕೃಷಿಯಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವಂತೆ ಕ್ರಮ ವಹಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಹಸಿರು ಸೇನೆ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಸರ್ಕಾರಗಳು ರೈತರಿಗೆ ಸಮರ್ಪಕ ಸವಲತ್ತುಗಳನ್ನು ಒದಗಿಸುತ್ತಿಲ್ಲ. ಇದರಿಂದ ರೈತರು ಕೃಷಿಯಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿಲ್ಲ. ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಸರ್ಕಾರ ಮಟ್ಟದಲ್ಲಿ ದೇಶಿ ತಳಿಗಳನ್ನು ಉಳಿಸುವ ನಿಟ್ಟಿನಲ್ಲಿ ಸಿರಿದಾನ್ಯಗಳನ್ನು ಬೆಳಯುವಂತೆ ಪ್ರೋತ್ಸಾಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಮಂಜುಳಾ, ತಾಪಂ ಸದಸ್ಯ ರಾಜೇಂದ್ರ, ಕಿಸಾನ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಗ್ರಾಪಂ ಅಧ್ಯಕ್ಷೆ ನಲ್ಲಮ್ಮ, ಸಹಾಯಕ ಕೃಷಿ ನಿರ್ದೇಶಕ ಬಿ.ಎಸ್ ಮಹದೇವು, ಕೃಷಿ ಅಧಿಕಾರಿಗಳಾದ ಸಿದ್ದಪ್ಪಸ್ವಾಮಿ, ಮನೋಹರ್, ದೊರೈರಾಜು ಹಾಗೂ ಇನ್ನಿತರರಿದ್ದರು.







