ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ವಿಚಾರ: ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು, ಜೂ.28: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದೆ. ಪರಿಣಾಮ ಸ್ಥಗಿತಗೊಂಡಿದ್ದ ವರ್ಗಾವಣೆಗೆ ಪ್ರಕ್ರಿಯೆಗೆ ಮರು ಚಾಲನೆ ದೊರೆತಂತಾಗಿದೆ.
ಬೆಂಗಳೂರಿನ ರಾಜಾಜಿನಗರದ ಶಿಕ್ಷಕಿ ಪ್ರಭಾ ಅಡಿಗಲ್ ಎಂಬುವರು ಸಲ್ಲಿಸಿದ್ದ ಅರ್ಜಿಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ನ್ಯಾ.ಎಚ್.ಜಿ.ರಮೇಶ್ ಮತ್ತು ನ್ಯಾ.ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಸರಕಾರದ ಪರ ವಾದ ಮಂಡಿಸಿದ ವಕೀಲರು, ಸರಕಾರ ಶಿಕ್ಷಕರ ವರ್ಗಾವಣೆ ನಿಯಮಕ್ಕೆ 2017ರ ಎ.18ರಂದೇ ತಿದ್ದುಪಡಿ ಮಾಡಿದೆ. ಅದರ ಅನ್ವಯ ಅಂತರ ವಲಯ ವರ್ಗಾವಣೆಗೆ ಅವಕಾಶ ಕಲ್ಪಿಸಿದೆ. ವರ್ಗಾವಣೆ ನಿಯಮವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಈ ಹಿಂದೆ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ಸರಕಾರದ ಅಧಿಸೂಚನೆಯಿಂದಾಗಿ ನಗರ ಪ್ರದೇಶಗಳಲ್ಲಿ ನೆಲೆಸಿರುವ ಶಿಕ್ಷಕರು ಗ್ರಾಮೀಣ ಭಾಗದಲ್ಲಿಯೂ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿದೆ. ಅಲ್ಲದೆ, ಗ್ರಾಮೀಣ ಭಾಗದ ಶಿಕ್ಷಕರ ಕೊರತೆ ಪೂರ್ಣ ಪ್ರಮಾಣದಲ್ಲಿ ತುಂಬಲು ಸಹಕಾರಿಯಾಗಲಿದೆ. ಅಲ್ಲದೆ, ವರ್ಗಾವಣೆ ನೀತಿಗೆ ತಡೆಯಾಜ್ಞೆ ನೀಡಿರುವುದರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿದೆ. ಹೀಗಾಗಿ, ತೆರವುಗೊಳಿಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಮದ ಪ್ರಕಾರ ಒಂದು ವಲಯದಿಂದ ಇನ್ನೊಂದು ವಲಯಕ್ಕೆ ವರ್ಗಾವಣೆ ಮಾಡುವಂತಿಲ್ಲ. ಆದರೆ ಸರಕಾರ ಹೊರಡಿಸಿರುವ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಅನ್ವಯ, ಒಂದು ವಲಯದಿಂದ ಇನ್ನೊಂದು ವಲಯಕ್ಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಇದು ಕಾನೂನು ಬಾಹಿರ ಕ್ರಮ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪಪೀಠ, ಶಿಕ್ಷಕರ ವರ್ಗಾವಣೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿತು. ಅಲ್ಲದೆ, ತಿದ್ದುಪಡಿ ಅರ್ಜಿ ಸಲ್ಲಿಸುವುದಕ್ಕೆ ಅರ್ಜಿದಾರರ ಪರ ವಕೀಲರಿಗೆ ಅವಕಾಶ ನೀಡಿ ಅರ್ಜಿ ಇತ್ಯರ್ಥಪಡಿಸಿತು.
ಪ್ರಕರಣ ಏನು: ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ)ಅಧಿನಿಯಮ 2007ರ ಕಲಂ 2ರಂತೆ ಎ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಬಿ ಮತ್ತು ಸಿ ವಲಯಗಳಿಗೆ ಕಡ್ಡಾಯವಾಗಿ ವರ್ಗಾವಣೆ ಮಾಡುವ ಕುರಿತು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯಂತೆ ಮಹಾನಗರ ಪಾಲಿಕೆಗಳು, ನಗರ ಪಾಲಿಕೆಗಳು, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಅಧಿಸೂಚಿತ ಪ್ರದೇಶ, ಪಟ್ಟಣ ಪ್ರದೇಶ ಹಾಗೂ ತಾಲೂಕು ಕೇಂದ್ರ ವ್ಯಾಪ್ತಿಯ ಸರಹದ್ದಿನ ವ್ಯಾಪ್ತಿ ಪ್ರದೇಶಗಳು ಗ್ರಾಮೀಣ ಭಾಗಕ್ಕೆ ವರ್ಗಾವಣೆ ಮಾಡಬೇಕಾಗಿತ್ತು. ಈ ಕ್ರಮವನ್ನು ಪ್ರಭಾ ಅಡಿಗಲ್ ಅವು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.







