2ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ: ಬೇಡಿಕೆ ಈಡೇರಿಸುವಂತೆ ನೌಕರರ ಆಗ್ರಹ
ಬೆಂಗಳೂರು, ಜೂ.28: ಸರಕಾರಿ ವಸತಿ ಶಾಲೆ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವುದನ್ನು ನಿಲ್ಲಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್-ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರ ಪ್ರತಿಭಟನಾ ಧರಣಿ ಎರಡನೆ ದಿನಕ್ಕೆ ಕಾಲಿಟ್ಟಿದೆ.
ನಗರದ ಸ್ವಾತಂತ್ರ ಉದ್ಯಾನದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ಎರಡನೆ ದಿನ ಪೂರೈಸಿತು. ಸಾವಿರಾರರು ಮಹಿಳಾ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿ, ತಮ್ಮ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕೆಂದು ಮನವಿ ಮಾಡಿದರು.
ಧರಣಿಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ನಿತ್ಯಾನಂದ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಡೆಸುವ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸುಮಾರು 12 ಸಾವಿರ ಹೊರಗುತ್ತಿಗೆ ನೌಕರರು ದುಡಿಯುತ್ತಿದ್ದಾರೆ. ಇದೀಗ ಸರಕಾರ ನೇರ ನೇಮಕಾತಿ ಮೂಲಕ ಐದು ಸಾವಿರ ನೌಕರರನ್ನು ನೇಮಿಸಿಕೊಂಡಿರುವುದರಿಂದ ಇಷ್ಟೇ ಪ್ರಮಾಣದ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಆರೋಪಿಸಿದರು.
ನೇಮಕಾತಿ ನಿಯಮಾವಳಿ ಬದಲಾಯಿಸಿ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಅವಕಾಶವಿದೆ. ಆದರೆ, ಸರಕಾರ ನೇರ ನೇಮಕಾತಿ ಮೂಲಕ ಹೊಸಬರಿಗೆ ಮಣೆ ಹಾಕುತ್ತಿದೆ. ಹೊಸಬರಿಗೆ ಅಡುಗೆ ಕೆಲಸ ಬರುವುದಿಲ್ಲ ಎಂದ ಅವರು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಭರವಸೆ
‘ಧರಣಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಸಂಘದ ಮುಖಂಡರೊಂದಿಗೆ ಚರ್ಚಿಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಭೀಮಶೆಟ್ಟಿ ಯಂಪಳ್ಳಿ ತಿಳಿಸಿದರು.







