ಚಿಕ್ಕಮಗಳೂರು: ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚಿಕ್ಕಮಗಳೂರು, ಜೂ.28: ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಸಾದರಹಳ್ಳಿ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ.
ನಗರ ಸಮೀಪದಲ್ಲಿರುವ ಸಾದರಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ 20ಕ್ಕೂ ಹೆಚ್ಚು ಮಂದಿ ಕಲುಷಿತ ನೀರು ಸೇವನೆಯಿಂದಾಗಿ ವಾಂತಿ, ಬೇಧಿಯಿಂದ ಬಳಲುತ್ತಿದ್ದು, ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರಿನ ಪೈಪ್ ಒಡೆದು ಕಲುಷಿತ ಚರಂಡಿ ನೀರು ಮಿಶ್ರಣವಾಗಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡಿರಬಹದು ಎಂದು ವೈದ್ಯಾಧಿಕಾರಿಗಳು ಶಂಕಿಸಿದ್ದಾರೆ. ಗ್ರಾಮದಲ್ಲಿ ಮೂರು ದಿನಗಳಿಂದ ಅಸ್ವಸ್ಥರಾಗಿರುವ 20ಕ್ಕೂ ಹೆಚ್ಚು ನಿವಾಸಿಗಳನ್ನು ನಗರದ ಜಿಲ್ಲಾಸ್ಪತ್ರೆ ಹಾಗೂ ಕೆಲ ಅಸ್ವಸ್ಥರನ್ನು ಹಾಸನದ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್ ನೇತೃತ್ವದ ವೈದ್ಯರ ತಂಡ ಸಾದರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಮಾದರಿಯನ್ನು ಈ ವೇಳೆ ಪರಿಶೀಲಿಸಿ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ. ಇದೇ ವೇಳೆ ಗ್ರಾಮಸ್ಥರ ರಕ್ತದ ಮಾದರಿಗಳನ್ನೂ ವೈದ್ಯರು ಪರೀಕ್ಷೆಗಾಗಿ ಪಡೆದರು.
ಸಾಂಕ್ರಾಮಿಕ ರೋಗದ ಭೀತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಕೆಲ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆ ಗುರುವಾರ ಬೆಳಗ್ಗೆ ಸಾದರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಗ್ರಾಮಸ್ಥರೊಂದಿಗೆ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ, ಗ್ರಾಮದಲ್ಲಿನ ಅನೈರ್ಮಲ್ಯದ ಬಗ್ಗೆ ನಿವಾಸಿಗಳಿಂದ ಮಾಹಿತಿ ಪಡೆದರು.







