ಹೊಸ ತಾಲೂಕುಗಳ ಕಾರ್ಯ ಚಟುವಟಿಕೆಗೆ ಕ್ರಮ: ಸಚಿವ ದೇಶಪಾಂಡೆ

ಬೆಂಗಳೂರು, ಜು. 10: ಹೊಸದಾಗಿ ಘೋಷಿಸಿದ 50 ತಾಲೂಕುಗಳ ಕಾರ್ಯಾರಂಭ ಮತ್ತು ಆಡಳಿತಾತ್ಮಕ ಪ್ರಕ್ರಿಯೆ ಪ್ರಾರಂಭಿಸಲು ತಲಾ 10 ಲಕ್ಷ ರೂ.ಗಳನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈಗಾಗಲೇ ಹೊಸ ತಾಲೂಕು ಮಟ್ಟದಲ್ಲಿರಬೇಕಾದ ಇಲಾಖೆಗಳ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಮೂಲಸೌಲಭ್ಯ ಕಲ್ಪಿಸಲು ಹೆಚ್ಚಿನ ಹಣ ಬೇಕಾಗಿದ್ದು, ಸಿಎಂ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಹೆಬ್ರಿ ತಾಲೂಕಿನ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ಚಾರಾ ಗ್ರಾಮದಲ್ಲಿ ಸರ್ವೆ ನಂಬರ್ 153/3ಎ ನಲ್ಲಿ 11.15 ಎಕರೆ ಜಮೀನು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಾಸಕರು ಯೋಗ್ಯ ಸ್ಥಳಾ ಸೂಚಿಸಿದರೆ ಈ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ದೇಶಪಾಂಡೆ ತಿಳಿಸಿದರು.
ಆರಂಭಕ್ಕೆ ಹೊಸ ತಾಲೂಕುಗಳ ಸಮಸ್ಯೆಗಳ ಮೇಲೆ ಬಿಜೆಪಿ ಸದಸ್ಯರಾದ ಜಗದೀಶ್ ಶೆಟ್ಟರ್, ಎ.ಎಸ್.ಪಾಟೀಲ್ ನಡಹಳ್ಳಿ ಸೇರಿದಂತೆ ಹಲವು ಮಂದಿ ಬೆಳಕು ಚೆಲ್ಲಿದರು. ಅಲ್ಲದೆ, ಹೊಸ ತಾಲೂಕುಗಳಿಗೆ ಸೂಕ್ತ ಕಟ್ಟಡ, ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಅಕ್ರಮ ಭೂ ಮಂಜೂರು ತನಿಖೆಗೆ ಕ್ರಮ
ನಿಯಮ ಮೀರಿ ಭೂಮಿ ಮಂಜೂರು ಮಾಡಿರುವ ಬಗ್ಗೆ ವಿಶೇಷ ತನಿಖೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಜೆ.ಸಿ. ಮಾಧುಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಆಯಾ ವಿಧಾನಸಭಾ ಸದಸ್ಯರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ವೇಳೆ ಮಧ್ಯೆಪ್ರವೇಶಿಸಿದ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್, ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹಾರಕ್ಕೆ ರಾಜ್ಯ ಮಟ್ಟದ ವಿಶೇಷ ಅಧಿಕಾರಿಯನ್ನು ನೇಮಿಸಿ ಮೂರು ತಿಂಗಳ ಅವಧಿಯಲ್ಲಿ ತನಿಖೆ ನಡೆಸಲು ಕ್ರಮಕೈಗೊಳ್ಳುವಂತೆ ಸಲಹೆ ಮಾಡಿದರು.







