ಕೊಡಗಿನ ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಲು ಸರಕಾರ ಬದ್ಧ: ಸಚಿವ ಶಿವಾನಂದ ಪಾಟೀಲ್ ಭರವಸೆ

ಮಡಿಕೇರಿ, ಜು.9: ರಾಷ್ಟ್ರೀಯ ಪ್ರಧಾನ ಮಂತ್ರಿ ಡಯಾಲಿಸಿಸ್ ನಿಯಂತ್ರಣ ಕಾರ್ಯಕ್ರಮದಡಿ ಪ್ರತಿ ಜಿಲ್ಲಾಸ್ಪತ್ರೆಯಲ್ಲಿ 10 ಹಾಗೂ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 2 ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ನಿರ್ದೇಶನವಿದ್ದು, ಅದರಂತೆ ಮೂರು ಪ್ರದಾನ ಆಸ್ಪತ್ರೆಗಳು, 20 ಜಿಲ್ಲಾ ಆಸ್ಪತ್ರೆಗಳು ಹಾಗೂ 148 ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೌಲಭ್ಯವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾರೆ.
ವಿಧಾನ ಪರಿಷತ್‍ನಲ್ಲಿ ಸದಸ್ಯೆ ವೀಣಾ ಅಚ್ಚಯ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಯಾಲಿಸಿಸ್ ಕೇಂದ್ರಗಳಲ್ಲಿ ಎಲ್ಲಾ ವರ್ಗದವರಿಗೆ ಉಚಿತವಾಗಿ ಡಯಾಲಿಸಿಸ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಲಾಖೆ ವತಿಯಿಂದ ಕೇಂದ್ರ ಸ್ಥಾಪನೆಗೆ ಸ್ಥಳಾವಕಾಶ, ನೀರು ಮತ್ತು ವಿದ್ಯುತ್ ಸೌಲಭ್ಯವನ್ನು ಒದಗಿಸಬೇಕಿದ್ದು, ಡಯಾಲಿಸಿಸ್ ಸೇವೆ ಒದಗಿಸಲು ಗುರುತಿಸಲಾದ ಸೇವಾದಾರರು ಮಾನವಸಂಪನ್ಮೂಲ, ಡಯಾಲಿಸಿಸ್ ಯಂತ್ರಗಳು, ಆರ್.ಒ ಪ್ಲಾಂಟ್ ಹಾಗೂ ಡಯಾಲಿಸಿಸ್ ಪರಿಕರಗಳನ್ನು ಒದಗಿಸಬೇಕಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಜಿಲ್ಲಾ ಆಸ್ಪತ್ರೆ, ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕು ಆಸ್ಪತ್ರೆ ಸೇರಿದಂತೆ ಮೂರು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿರುವ ಸಚಿವರು, ಸರಕಾರ ನಿಗದಿಪಡಿಸಿರುವ ಮಾನದಂದಡಗಳ ಪ್ರಕಾರ ಜನಸಂಖ್ಯೆಗೆ ಅನುಗುಣವಾಗಿ ಜಿಲ್ಲೆಯಲ್ಲಿ ಡಯಾಲಿಸಿಸ್ ಕೇಂದ್ರಗಳು ಸ್ಥಾಪನೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ವಿವರಿಸಿದ್ದಾರೆ.







