ಉಡುಪಿ:100 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
ಉಡುಪಿ, ಜು.12: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾಟಿ ಇದೇ ಜು.14ರ ಶನಿವಾರ ಬೆಳಗ್ಗೆ 11:00 ಗಂಟೆಗೆ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಸುಮಾರು 15 ಲಕ್ಷ ರೂ. ಮೌಲ್ಯದ 50 ಸಾವಿರಕ್ಕಿಂತಲೂ ಅಧಿಕ ನೋಟ್ ಪುಸ್ತಕಗಳನ್ನು ಜಿಲ್ಲೆಯ 100 ಕನ್ನಡ ಮಾಧ್ಯಮ ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ವಿತರಿಸಲಿದೆ.
ಅಲ್ಲದೇ ಉಡುಪಿಯ ಲಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಂಘದ ಸದಸ್ಯರಿಗೆ, ಗ್ರಾಹಕರಿಗೆ ಲಂಬಾರ್ಡ್ ಆರೋಗ್ಯ ಕಾರ್ಡ್‌ನ್ನು ವಿತರಿಸಲಿದೆ. ಇದರೊಂದಿಗೆ ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮ, ಗೋ-ಗ್ರೀನ್ ಅಭಿಯಾನದಡಿ ಇಂಧನ ಉಳಿತಾಯ ಹಾಗೂ ಪರಿಸರ ಮಾಲಿನ್ಯ ತಡೆಗೆ ಒತ್ತು ನೀಡುವ ಉದ್ದೇಶದಿಂದ ಸಂಘದ ಸಿಬ್ಬಂದಿಗಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮ ಕೂಡಾ ಅಂದು ನಡೆಯಲಿದೆ ಎಂದು ಸೊಸೈಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಹಾಗೂ ಸಂಘದ ಶತಮಾನೋತ್ಸವ ಸಮಿತಿಯ ಗೌರವ ಸಲಹೆಗಾರ ರಾದ ಡಾ. ಎಂ.ಮೋಹನ್ ಆಳ್ವ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ ನಾಯಕ್ ಹಾಗೂ ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಪಿ. ಶೆಟ್ಟಿ ಉಪಸ್ಥಿತರಿರುವರು ಎಂದು ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ಹಾಗೂ ಪ್ರಧಾನ ವ್ಯವಸ್ಥಾಪ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.







