ವಕ್ಫ್ ಆಸ್ತಿ ಕಬಳಿಕೆ ಸಂಬಂಧ ಅನ್ವರ್ ಮಾಣಿಪ್ಪಾಡಿ ವರದಿ: ಸಿಬಿಐ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯ

ಬೆಂಗಳೂರು, ಜು.13: ರಾಜ್ಯಾದ್ಯಂತ ವಕ್ಫ್ ಆಸ್ತಿಗಳ ಕಬಳಿಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ 2012ರಲ್ಲಿ ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನಾಧರಿಸಿ ಒಂದು ತಿಂಗಳೊಳಗೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಒತ್ತಾಯಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸಿಬಿಐ ತನಿಖೆಗೆ ವಹಿಸುವುದಾಗಿ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ವಿಧಾನಪರಿಷತ್ ಕಲಾಪದಲ್ಲಿ ಒಪ್ಪಿಕೊಂಡಿದ್ದಾರೆ ಎಂದರು.
ಸಭಾಪತಿಗಳು ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಸಚಿವರು ಒಪ್ಪಿಕೊಂಡಿದ್ದನ್ನು ತಿಳಿಸಿದ್ದಾರೆ. ಹೀಗಾಗಿ, ಒಂದು ತಿಂಗಳಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ರಾಜ್ಯ ಸರಕಾರವೇನಾದರೂ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಹಿಂದೇಟು ಹಾಕಿದರೆ, ವಿರೋಧ ಪಕ್ಷವಾಗಿ ನಾವು ಸದಸ್ಯರೆಲ್ಲ ಹಕ್ಕುಚ್ಯುತಿಯನ್ನು ಮಂಡಿಸುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.





