ಕೆಪಿಎಸ್ಸಿ ನೇಮಕಾತಿ ಹಗರಣ: ಸಂದರ್ಶನಕ್ಕೆ ಅವಕಾಶ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

ಬೆಂಗಳೂರು, ಜು.13: ಗ್ರೂಪ್ ಎ ಮತ್ತು ಗ್ರೂಪ್ ಬಿ 2011ರ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ಆಯ್ಕೆಯಲ್ಲಿ ಯಾವುದೆ ಅಕ್ರಮ ನಡೆದಿಲ್ಲ. ಆಯ್ಕೆಯಾದ 362 ಜನರ ಪಟ್ಟಿಯಲ್ಲಿರುವ ನಾವ್ಯಾರೂ ಕಳಂಕಿತರಲ್ಲ. ಹೀಗಾಗಿ, ಮುಖ್ಯ ಪರೀಕ್ಷೆ ಮೌಲ್ಯಮಾಪನದ ಆಧಾರದ ಮೇಲೆ ಅಭ್ಯರ್ಥಿಗಳ ಸಂದರ್ಶನಕ್ಕೆ ಅವಕಾಶ ಕಲ್ಪಿಸಲು ನಿರ್ದೇಶಿಸಬೇಕು ಎಂದು ಕೋರಿದ್ದ ಅರ್ಜಿಗಳ ಮರು ವಿಚಾರಣೆ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಸಂಬಂಧ ಕೆಪಿಎಸ್‌ಸಿ ಮತ್ತು ಆಯ್ಕೆಯಾದ 362 ಜನ ಅಭ್ಯರ್ಥಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.
ಪ್ರಕರಣವೇನು: 2011ನೆ ಸಾಲಿನ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) 2016ರ ಅಕ್ಟೋಬರ್ 19ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಆರ್.ರೇಣುಕಾಂಬಿಕೆ ಹಾಗೂ ಅವಕಾಶ ವಂಚಿತ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ಆಯ್ಕೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂಬ ಅಭಿಪ್ರಾಯದೊಂದಿಗೆ ಕೆಎಟಿ ಆದೇಶ ರದ್ದುಗೊಳಿಸಿ 2018ರ ಮಾರ್ಚ್ 9ರಂದು ಆದೇಶ ನೀಡಿತ್ತು.
ಇದನ್ನು ಪ್ರಶ್ನಿಸಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಯಲ್ಲಿ ಏನಾದರೂ ಭ್ರಷ್ಟಾಚಾರ ನಡೆದಿದೆಯೇ ಎಂಬ ಬಗ್ಗೆ ಇನ್ನೊಮ್ಮೆ ಪರಿಶೀಲನೆ ನಡೆಸಿ ಎಂದು ಅರ್ಜಿದಾರರು ಪುನಃ ಹೈಕೋರ್ಟ್‌ಗೆ ಸಲ್ಲಿಸಬಹುದು ಎಂದು ಅವಕಾಶ ನೀಡಿತ್ತು. ಇದರ ಅನ್ವಯ ಅರ್ಜಿದಾರರು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.







