ಶಿವಮೊಗ್ಗ: ನೆರೆ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ನೆರವಿಗಾಗಿ ಸರಕಾರಕ್ಕೆ ಮನವಿ; ಜಿಪಂ ಅಧ್ಯಕ್ಷೆ ಜ್ಯೋತಿ

ಶಿವಮೊಗ್ಗ, ಜು. 13: ಇತ್ತೀಚೆಗೆ ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದ ಹಲವೆಡೆ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವಾಗಿದೆ. ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಸರಕಾರದಿಂದ ಸೂಕ್ತ ಅನುದಾನ ಕಲ್ಪಿಸುವ ಕುರಿತಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ದೊಡ್ಲುಮನೆ ಸಮೀಪದ ಗುಡ್ಡೇ ಕೆರೆ ಗ್ರಾಮದಲ್ಲಿ ಇತ್ತೀಚೆಗೆ ಕಾಲುಸಂಕ ದಾಟುವ ವೇಳೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಆಶಿಕಾ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ವೈಯಕ್ತಿಕ ನೆರವು ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕಿ ಆಶಿಕಾ ಸಾವು ನಿಜಕ್ಕೂ ದುರದೃಷ್ಟಕರ ಸಂಗತಿ. ಈಗಾಗಲೇ ಬಾಲಕಿ ಕುಟುಂಬಕ್ಕೆ ಜಿಲ್ಲಾಡಳಿತದ ಸೂಕ್ತ ಪರಿಹಾರ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಅವಘಡಗಳು ಸಂಭವಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಕಳೆದ ಕೆಲ ದಿನಗಳ ಹಿಂದೆ ಜಿಪಂ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿಯೂ ಕಾಲುಸಂಕದ ಕುರಿತಂತೆ ಚರ್ಚೆ ನಡೆಸಲಾಗಿದೆ. ಎಲ್ಲೆಲ್ಲಿ ಕಾಲುಸಂಕವಿದೆ ಎಂಬುವುದರ ಮಾಹಿತಿ ಕಲೆ ಹಾಕಿ, ಎನ್‌ಆರ್‌ಇಜಿ ಯೋಜನೆಯಡಿ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಇದೇ ಸಂರ್ಭದಲ್ಲಿ ಅವರು ಮಾಹಿತಿ ನೀಡಿದ್ದಾರೆ.
ಜು. 17ರಂದು ನಡೆಯಲಿರುವ ಜಿಪಂ ಸಾಮಾನ್ಯ ಸಭೆಯಲ್ಲಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ಕುರಿತಂತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು. ಹಾಗೆಯೇ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗುವುದು. ತದನಂತರ ಜಿಲ್ಲೆಗೆ ಅಗತ್ಯವಾದ ಅನುದಾನ ಬಿಡುಗಡೆ ಮಾಡುವಂತೆ ಕೋರಿ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಭಾರತಿ ಬಾಳೆಹಳ್ಳಿ ಪ್ರಭಾಕರ, ಹೊನ್ನೇತಾಳು ಗ್ರಾಪಂ ಅಧ್ಯಕ್ಷೆ ನೂರ್ ಜಹಾನ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನ ಕುಮಾರ್, ಗುಡ್ಡೇಕೇರಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು, ಸ್ಥಳೀಯರಾದ ನಿತ್ಯಾನಂದ ಅನುಗೋಡು, ರಮೇಶ್ ಮೊದಲಾದವರಿದ್ದರು.







