ಉಡುಪಿ: 100 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಉಡುಪಿ, ಜು.14: ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಉಡುಪಿ ತಾಲೂಕಿನ 100 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಶನಿವಾರ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಜರಗಿತು.
ಸುಮಾರು 15ಲಕ್ಷ ರೂ. ಮೌಲ್ಯದ 50 ಸಾವಿರಕ್ಕಿಂತಲೂ ಅಧಿಕ ನೋಟ್ ಪುಸ್ತಕಗಳನ್ನು ತಾಲೂಕಿನ 100 ಕನ್ನಡ ಮಾಧ್ಯಮ ಶಾಲಾ ಕಾಲೇಜಿನ ವಿದ್ಯಾರ್ಥಿ ಗಳಿಗೆ ವಿತರಿಸಲಾಯಿತು. ಸಂಘದ 1900 ಸದಸ್ಯರಿಗೆ ಲಂಬಾರ್ಡ್ ಆರೋಗ್ಯ ಕಾರ್ಡ್, ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿಗೆ ಕುರ್ಚಿ, ಮಕ್ಕಳ ಶ್ರವಣ ಯಂತ್ರ ಜೋಡಣೆ, ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ ಹಾಗೂ ಗೋ ಗ್ರೀನ್ ಅಭಿಯಾನದಡಿ ಸಿಬ್ಬಂದಿಗಳಿಗೆ ಸೈಕಲ್‌ಗಳನ್ನು ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ವಹಿಸಿದ್ದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವ ರಾಜ್, ಉಡುಪಿ ಜಿಲ್ಲಾ ಸಹಕಾರ ಸಂಘ ಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಸಂಘದ ಉಪಾಧ್ಯಕ್ಷ ಎಲ್.ಉಮಾನಾಥ್ ಉಪಸ್ಥಿತರಿದ್ದರು. ಅಧ್ಯಕ್ಷ ಸಂಜೀವ ಕಾಂಚನ್ ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ಪ್ರವೀಣ್ ಕುಮಾರ್ ವಂದಿಸಿದರು. ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.







