ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮ: ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಜು.18: ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಶೈಕ್ಷಣಿಕ ಗುಣಮಟ್ಟ ಕುಸಿದಿರೋ ಹಿನ್ನೆಲೆಯಲ್ಲಿ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮಕೈಗೊಳ್ಳಲಾಗುವುದು. ಕಾಲೇಜುಗಳಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಗ್ರಂಥಾಲಯ ತೆರೆಯಲಾಗುವುದು. ಕಡಿತಗೊಂಡಿರುವ ಬೋಧಕ ಸಿಬ್ಬಂದಿಗಳನ್ನು ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಕಾಲೇಜುಗಳ ನೂತನ ಕಟ್ಟಡ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದ್ದು, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಇನ್ನು ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಕುರಿತು ಮಾತನಾಡಿದ ಅವರು, ಪ್ರತಿ ಸೋಮವಾರ ಗ್ರಾಮ ಪಂಚಾಯತ್ ಅಧಿಕಾರಿಗಳು ಕಚೇರಿಯಲ್ಲಿ ಇರಬೇಕು. ಸ್ಥಳೀಯ ಜನರ ಸಮಸ್ಯೆಗಳು ಅಲ್ಲಿಯೇ ನಿವಾರಣೆಯಾಗಬೇಕು. 2 ತಿಂಗಳಿಂದ ಬ್ಯೂಸಿ ಇದ್ದೆ. ಈಗ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತೇನೆ. ಜನರು ಕುಂದು ಕೊರತೆ ಹೇಳಿಕೊಂಡಿದ್ದಾರೆ. ಸಾಧ್ಯವಾದಷ್ಟು ಶೀಘ್ರ ಪರಿಹಾರ ಮಾಡಲು ಪ್ರಯತ್ನಿಸುತ್ತೇನೆ ಎಂದರು.







