ಲೋಕಸಭಾ ಚುನಾವಣಾ ಪೂರ್ವ ಮೈತ್ರಿಗೆ ವಿರೋಧವಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು, ಜು.24: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವ ಮೈತ್ರಿ ಕುರಿತು ನಿರ್ಧಾರ ಮಾಡುವುದು ಹೈಕಮಾಂಡ್. ಆದುದರಿಂದ, ಈ ಬಗ್ಗೆ ಯಾವ ನಾಯಕರೂ ವಿರೋಧ ವ್ಯಕ್ತಪಡಿಸಿಲ್ಲ ಎಂದರು.
ಮೈತ್ರಿ ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು ಹೇಳಿಕೆ ನೀಡುತ್ತಿರುವ ಕುರಿತು ಸುದ್ದಿಗಾರರು ಕೇಳಿ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸಂಬಂಧ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡಗೆ ಪಕ್ಷದ ವತಿಯಿಂದ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಅವರು ಏನು ಉತ್ತರ ನೀಡುತ್ತಾರೆ ಎಂಬುದನ್ನು ನೋಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ, ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರನ್ನು ನೇಮಕ ಮಾಡುವ ಸಂಬಂಧ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಶಾಸಕರು ಆಷಾಢ ಮಾಸ ಇರುವ ಕಾರಣ ಅಧಿಕಾರ ಸ್ವೀಕರಿಸಲು ಮುಂದಾಗುತ್ತಿಲ್ಲ. ಆದುದರಿಂದ, ಆಷಾಢ ಮಾಸ ಮುಗಿದ ಬಳಿಕ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಸಭೆ ಸಚಿವಾಲಯದ ಸೋಫಾಗಳನ್ನು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ತಮ್ಮ ಖಾಸಗಿ ನಿವಾಸಕ್ಕೆ ಬಳಸಿಕೊಂಡಿರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿಯನ್ನು ಪಡೆದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಅವರು ತಿಳಿಸಿದರು.







