ಜು.28: ಕೆಪಿಸಿಸಿ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ

ಬೆಂಗಳೂರು, ಜು.26: ಕರ್ನಾಟಕ ಪ್ರದೇಶ ಕಾಂಗ್ರೆಸ್ ಮುಂಚೂಣಿ ಘಟಕಗಳ ಮಾಜಿ ಪದಾಧಿಕಾರಿಗಳ ಒಕ್ಕೂಟದ ವತಿಯಿಂದ ಕೆಪಿಸಿಸಿ ಹಾಗೂ ಎಐಸಿಸಿಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಜು.28 ರಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ನಗರದ ಪ್ರೆಸ್‌ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ತು ಸದಸ್ಯ ಎಂ.ನಾರಾಯಣಸ್ವಾಮಿ, ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾಗಿರುವ ಈಶ್ವರಖಂಡ್ರೆ ಹಾಗೂ ಎಐಸಿಸಿ ಕಾರ್ಯದರ್ಶಿಯಾಗಿರುವ ಸಲಿಂ ಅಹಮದ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರಕಾರದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದ ವೀರಪ್ಪ ಮೊಯ್ಲಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಸಚಿವ ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಯು.ಟಿ.ಖಾದರ್, ರಮೇಶ್ ಜಾರಕಿಹೊಳಿ ಸೇರಿದಂತೆ ಹಾಲಿ ಶಾಸಕರು, ಸಂಸದರು, ವಿಧಾನಪರಿಷತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.





