ಆರೋಪಿ ನರೇಶ್ ಶೆಣೈಗೆ ನೀಡಿರುವ ಜಾಮೀನು ರದ್ದುಕೋರಿ ಹೈಕೋರ್ಟ್‌ಗೆ ಅರ್ಜಿ
ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣ

ಬೆಂಗಳೂರು, ಜು.27: ಆರ್‌ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಮೋ ಬ್ರಿಗೇಡ್ ನಾಯಕ ನರೇಶ್ ಶೆಣೈಗೆ ನೀಡಲಾಗಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಮೃತರ ಸಹೋದರಿ ಅನುರಾಧ ಬಾಳಿಗ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣದ ಆರೋಪಿ ನರೇಶ್ ಶೆಣೈಗೆ ಈ ಹಿಂದೆ ಮಂಜೂರು ಮಾಡಿದ್ದ ಜಾಮೀನು ರದ್ದುಪಡಿಸುವಂತೆ ಕೋರಿ ತಾವು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ದಕ್ಷಿಣ ಕನ್ನಡದ 6ನೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅನುರಾಧ ಬಾಳಿಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ನರೇಶ್ ಶೆಣೈ ಮತ್ತು ಮಂಗಳೂರಿನ ಬರ್ಕೆ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಆರೋಪಿ ನರೇಶ್ ಶೆಣೈಗೆ 2016ರ ಸೆ.15ರಂದು ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಮಂಗಳೂರಿನ ವೆಂಕಟರಮಣ ದೇವಸ್ಥಾನ ಮತ್ತು ಕಾಶಿಮಠದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿಯಬೇಕು ಎಂದು ಜಾಮೀನು ಮಂಜೂರು ವೇಳೆ ನರೇಶ್ ಶೆಣೈಗೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಆದರೆ, ನರೇಶ್ ಶೆಣೈ ಮಾತ್ರ ಜಾಮೀನು ಷರತ್ತು ಉಲ್ಲಂಘಿಸಿ, ವೆಂಕಟರಮಣ ದೇವಸ್ಥಾನ ಮತ್ತು ಕಾಶಿಮಠದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಹೀಗಾಗಿ, ಅವರಿಗೆ ಹಿಂದೆ ನೀಡಿರುವ ಜಾಮೀನು ರದ್ದುಪಡಿಸಬೇಕು ಎಂದು ಅನುರಾಧ ಬಾಳಿಗ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.
ಮಂಗಳೂರು ನಗರದ ಬೆಸೆಂಟ್ ಕಾಲೇಜಿನ ಬಳಿಯಲ್ಲಿ 2016ರ ಮಾರ್ಚ್ 21ರಂದು ಆರ್‌ಟಿಐ ಕಾರ್ಯಕರ್ತ ಬಾಳಿಗಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು, ನಮೋ ಬ್ರಿಗೇಡ್ ನಾಯಕ ನರೇಶ್ ಶೆಣೈ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಪ್ರಕರಣದ ಅಧೀನ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.







