ಎನ್ಎಂಸಿ ಕಾಯ್ದೆ ವಿರೋಧಿಸಿ ಖಾಸಗಿ ವೈದ್ಯರ ಮುಷ್ಕರ: ನವಜಾತ ಶಿಶು ಮರಣ
ಮುಷ್ಕರಕ್ಕೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು. 28: ಕೇಂದ್ರ ಸರಕಾರ ರಚಿಸಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ಎಂಸಿ)ದ ವಿರುದ್ಧ ಖಾಸಗಿ ವೈದ್ಯರು ರಾಜ್ಯಾದ್ಯಂತ ಹೊರ ರೋಗಿ ವಿಭಾಗ(ಒಪಿಡಿ)ವನ್ನು ಬಂದ್ ಮಾಡಿ ಮುಷ್ಕರ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಸಿಗದೇ ನವಜಾತ ಗಂಡು ಮಗು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದರಿಂದ ಬೆಳಗಾವಿಯಲ್ಲಿ ನವಜಾತ ಗಂಡು ಶಿಶು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಒಂದು ದಿನದ ಹಿಂದೆಯಷ್ಟೇ ಗೋಕಾಕ್ನಲ್ಲಿ ಜನಿಸಿದ್ದ ಗಂಡು ಮಗುವನ್ನು ಉಸಿರಾಟದ ತೊಂದರೆಯಿಂದ ಬೆಳಗಾವಿಗೆ ಕರೆತರಲಾಗಿತ್ತು. ಆದರೆ ಸರಿಯಾದ ಸಂದರ್ಭಕ್ಕೆ ಚಿಕಿತ್ಸೆ ದೊರೆಯದ ಕಾರಣ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಭಾರತೀಯ ವೈದ್ಯ ಸಂಘ ಧಿಕ್ಕಾರ್ ದಿವಸ್ ಹೆಸರಿನಲ್ಲಿ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಅದರಂತೆ ರಾಜ್ಯದಲ್ಲೂ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿದ್ದು, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಹೊರ ರೋಗಿ ವಿಭಾಗವನ್ನು ಬಂದ್ ಮಾಡಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರೆ, ಕೆಲವು ಜಿಲ್ಲೆಗಳಲ್ಲಿ ಕೆಲವು ವೈದ್ಯರು ಕಾರ್ಯನಿರ್ವಹಿಸುತ್ತಿದ್ದ ದೃಶ್ಯಗಳು ಕಂಡು ಬಂದವು. ಆದರೆ, ಒಟ್ಟಾರೆಯಾಗಿ ರಾಜ್ಯಾದ್ಯಂತ ವೈದ್ಯಕೀಯ ಸಂಘ ನೀಡಿದ್ದ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಳ ರೋಗಿಗಳ ಚಿಕಿತ್ಸಾ ಘಟಕ ಮತ್ತು ತುರ್ತುಚಿಕಿತ್ಸಾ ಘಟಕಗಳು ಸೇವೆ ಎಂದಿನಂತೆ ಕಾರ್ಯನಿರ್ವಹಿಸಿದರೆ, ಹೊರ ರೋಗಿಗಳ ವಿಭಾಗವನ್ನು ಬಂದ್ ಮಾಡಲಾಗಿತ್ತು.
ರಾಜ್ಯದಲ್ಲಿ ಅಧಿಕೃತವಾಗಿ ಅನುಮತಿ ಪಡೆದಿರುವ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಸಣ್ಣ ಕ್ಲಿನಿಕ್ಗಳು ಸೇರಿದಂತೆ ಒಟ್ಟು 25 ಸಾವಿರ ಅಧಿಕ ಕ್ಲಿನಿಕ್ಗಳಿದ್ದು, ಎಲ್ಲ ಘಟಕಗಳಲ್ಲಿಯೂ ಸಂಪೂರ್ಣವಾಗಿ ಬಂದ್ನಲ್ಲಿ ಪಾಲ್ಗೊಂಡಿದ್ದರು. ಇದರ ಪರಿಣಾಮದಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದು, ರೋಗಿಗಳು ಚಿಕಿತ್ಸೆ ದೊರೆಯದೆ ಪರದಾಡುವಂತಾಗಿದೆ. ಹೈಟೆಕ್ ಆಸ್ಪತ್ರೆಗಳು ಸೇರಿದಂತೆ ಎಲ್ಲವೂ ಮುಚ್ಚಿದ್ದರಿಂದ ಸರಕಾರಿ ಆಸ್ಪತ್ರೆಗಳತ್ತ ಜನ ಮುಖ ಮಾಡಿದ್ದರು.
ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆ, ಅಪೋಲೊ, ಸುಗುಣ ಸೇರಿದಂತೆ ಬಹುತೇಕ ಆಸ್ಪತ್ರೆಗಳು ಬಂದ್ಗೆ ಬೆಂಬಲ ನೀಡಿರಲಿಲ್ಲ. ನಮಗೆ ಸಂಘದಿಂದ ಮುಷ್ಕರ ನಡೆಸುವ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ನಮ್ಮ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಿವೆ ಎಂದು ಆಸ್ಪತ್ರೆಗಳ ಮಂಡಳಿಗಳು ತಿಳಿಸಿದ್ದಾರೆ. ಇನ್ನುಳಿದಂತೆ ಮಂಗಳೂರು, ಉಡುಪಿ, ಚಿತ್ರದುರ್ಗ, ಕೊಪ್ಪಳ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಯಾದಗಿರಿ, ರಾಯಚೂರು, ಗುಲ್ಬರ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ವೈದ್ಯರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸರಕಾರ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವ ಮೂಲಕ ವೈದ್ಯಕೀಯ ಶಿಕ್ಷಣ ಮತ್ತು ವೈದ್ಯ ವೃತ್ತಿಯ ಮೇಲೆ ನಿಯಂತ್ರಣ ಹೇರುವ ಪ್ರಯತ್ನ ಮಾಡುತ್ತಿದೆ. ಈ ಆಯೋಗ ರಚನೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಅಲ್ಲದೆ, ಖಾಸಗಿ ವೈದ್ಯಕೀಯ ಕಾಲೇಜುಗಳು ಬಹಿರಂಗವಾಗಿ ಹಗಲು ದರೋಡೆಗೆ ಅನುಕೂಲವಾಗುತ್ತದೆ. ಇದರಿಂದಾಗಿ, ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತರಿಗೆ ಭಾರಿ ಅನ್ಯಾಯವಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕದ ಅಧ್ಯಕ್ಷ ರವೀಂದ್ರ ತಿಳಿಸಿದ್ದಾರೆ.
ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ಕೇಂದ್ರ ಸರಕಾರದ ನಾಮ ನಿರ್ದೇಶಕ ಸದಸ್ಯರೇ ಇರುತ್ತಾರೆ. ಹಾಗಾಗಿ ಇಡೀ ವೈದ್ಯಕೀಯ ವೃತ್ತಿ ಮತ್ತು ಶಿಕ್ಷಣವನ್ನು ಕೇಂದ್ರ ಸರಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ದೂರಿದರು
ಸರಕಾರಿ ಆಸ್ಪತ್ರೆಗಳಲ್ಲಿ ಜನಸಂದಣಿ: ಖಾಸಗಿ ಆಸ್ಪತ್ರೆಗಳ ವೈದ್ಯರು ಒಪಿಡಿ ಬಂದ್ ನಡೆಸಿ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ವೈದ್ಯರ ರಜೆಯನ್ನು ರದ್ದು ಮಾಡಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿತ್ತು. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಕರ್ತವ್ಯಕ್ಕೆ ಹಾಜರಾಗಿದ್ದು, ಒಪಿಡಿ ಸೇರಿದಂತೆ ಎಲ್ಲ ಸೇವೆಗಳು ಲಭ್ಯವಿದ್ದವು. ಖಾಸಗಿ ಕ್ಲಿನಿಕ್ಗಳ ಒಪಿಡಿ ಬಂದ್ ಆಗಿದ್ದರಿಂದ ಸರಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಸಂಖ್ಯೆ ಅಧಿಕವಾಗಿತ್ತು.







