ಮಂಗಳೂರು: ಬೃಹತ್ ಉದ್ಯೋಗ ಮೇಳ

ಮಂಗಳೂರು, ಜು.30: ಡಾ.ಪಿ.ದಯನಂದ ಪೈ-ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿವಿ ಉದ್ಯೋಗ ಮಾಹಿತಿ-ಮಾರ್ಗದರ್ಶನ ಕೇಂದ್ರ, ಯುವಜನ-ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.
ದ.ಕ. ಜಿಲ್ಲೆಯ ಸುಮಾರು 20ಕ್ಕೂ ಹೆಚ್ಚು ಕಂಪೆನಿಗಳು ಆಹ್ವಾನಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 600ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಇದರಲ್ಲಿ 150ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗದ ಪ್ರಮಾಣಪತ್ರವನ್ನು ನೀಡಲಾಯಿತು.
ದ.ಕ. ಜಿಲ್ಲೆಯ 19 ಸರಕಾರಿ ಕಾಲೇಜುಗಳು ಸೇರಿದಂತೆ ಆಯ್ದ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಶೇ.80ರಷ್ಟು ಉದ್ಯೋಗಾಕಾಂಕ್ಷಿಗಳು ಕನ್ನಡ ಮಾಧ್ಯಮದವರಾಗಿದ್ದಾರೆ. ಗ್ರಾಮೀಣ ಭಾಗದಿಂದಲೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು.
ಎಸೆಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಂಡರು.





