ಆ.16 ರಂದು ಅಂಗನವಾಡಿ ನೌಕರರ ಧರಣಿ
ಬೆಂಗಳೂರು, ಆ.2: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾ ಮಂಡಳಿಯಿಂದ ಆ.16 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿ ಕಾರ್ಯದರ್ಶಿ ಬಿ.ನಾಗರತ್ನಮ್ಮ, ರಾಜ್ಯಾದ್ಯಂತ ಸಾವಿರಾರು ಅಂಗನವಾಡಿ ಕೇಂದ್ರಗಳಲ್ಲಿ 1.28 ಲಕ್ಷಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೆಲಸ ಮಾಡುತ್ತಿದ್ದಾರೆ. ಆದರೆ, ಕೆಲಸದಿಂದ ನಿವೃತ್ತಿಯಾಗುತ್ತಿರುವವರಿಗೆ ಯಾವುದೇ ಸೌಲಭ್ಯಗಳು ಸಿಗದೇ ವಂಚಿತರಾಗುತ್ತಿದ್ದಾರೆ. ಹೀಗಾಗಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಇರುವ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸ್ಥಿತಿ ಶೋಚನೀಯವಾಗಿದ್ದು, ಸರಕಾರ ಕೂಡಲೇ ಅವರಿಗೆ ಪಿಂಚಣಿ ಮತ್ತು ವೈದ್ಯಕೀಯ ಸೌಲಭ್ಯವನ್ನು ಕಲ್ಪಿಸಬೇಕು. ಮಾತೃಪೂರ್ಣ ಯೋಜನೆಯ ಬಗ್ಗೆ ಸರಕಾರ ಸಮಗ್ರವಾಗಿ ಅಧ್ಯಯನ, ಸಮೀಕ್ಷೆ ನಡೆಸಬೇಕು ಹಾಗೂ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಫಲಾನುಭವಿಗಳ ಹಿತದೃಷ್ಟಿಯಿಂದ ಹಿಂದಿನ ರೀತಿಯಲ್ಲಿಯೇ ಮನೆಗಳಿಗೆ ಪೌಷ್ಠಿಕ ಆಹಾರವನ್ನು ನೀಡಬೇಕು ಮತ್ತು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಬೇಕು ಎಂದರು.
ಬಾಲ ವಿಕಾಸ ಸಮಿತಿಯ ಪುನರ್ ರಚಿಸುವಲ್ಲಿ ಗ್ರಾಮ, ಪಟ್ಟಣ ಪಂಚಾಯಿತಿಯ ಸದಸ್ಯರನ್ನು ಖಾತೆ ತೆರೆಯಲು ಕಡ್ಡಾಯ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು. ಅಂಗನವಾಡಿ ಕೇಂದ್ರಗಳ ಕೆಲಸದ ವೇಳೆಯನ್ನು ಹಿಂದಿನ ರೀತಿಯಲ್ಲಿ ಮಾರ್ಪಾಡು ಮಾಡಬೇಕು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೇಮಕ ಮಾಡಬೇಕು. ನಿವೃತ್ತಿಯಾದ ಹಾಗೂ ನಿವೃತ್ತಿ ಅಂಚಿನಲ್ಲಿರುವ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಇಡಗಂಟು ನೀಡಬೇಕು ಎಂದು ಅವರು ಒತ್ತಾಯಿಸಿದರು.







