ಮಡಿಕೇರಿ: ಸ್ವಾತಂತ್ರ್ಯ ದಿನದ ಅರ್ಥಪೂರ್ಣ ಆಚರಣೆಗೆ ಕೈಜೋಡಿಸಲು ಜಿಲ್ಲಾಧಿಕಾರಿ ಶ್ರೀವಿದ್ಯಾ ಕರೆ
ಮಡಿಕೇರಿ, ಆ.4: ಜಿಲ್ಲಾಡಳಿತ ವತಿಯಿಂದ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು. ಹಾಗೆಯೇ ಎಲ್ಲರೂ ತೊಡಗಿಸಿಕೊಂಡು ಸ್ವಾತಂತ್ರ್ಯ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸ್ವಾತಂತ್ರ್ಯ ದಿನಾಚರಣೆ ಇಡೀ ದೇಶದ ಎಲ್ಲರ ಸಂಭ್ರಮ ಆಚರಣೆಯಾಗಿದ್ದು, ಸ್ವಯಂ ಪ್ರೇರಣೆಯಿಂದ ಎಲ್ಲರೂ ಭಾಗವಹಿಸಬೇಕು. ಆಗಸ್ಟ್, 15 ರಂದು ಬೆಳಗ್ಗೆ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು, ಹಾಜರಾತಿಯಲ್ಲಿ ತಪ್ಪದೆ ಸಹಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಸ್ವಾತಂತ್ರ್ಯೋತ್ಸವ ಅಂಗವಾಗಿ ಕಾವೇರಿ ಕಲಾಕ್ಷೇತ್ರದಲ್ಲಿ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಅವರು ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಯನ್ನು ಉತ್ತಮ ರೀತಿಯಲ್ಲಿ ಆಚರಿಸಲು ಸ್ವಾಗತ, ವೇದಿಕೆ, ಧ್ವಜಾರೋಹಣ, ಕವಾಯತು, ಸಾಂಸ್ಕೃತಿಕ, ಆಹಾರ ಮತ್ತಿತರ ಉಪ ಸಮಿತಿಗಳು ಕಳೆದ ಬಾರಿಯಂತೆ ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಂಜುಂಡೇಗೌಡ, ಜಿ.ಪಂ.ಉಪ ಕಾರ್ಯದರ್ಶಿ ಬಾಬು, ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಯಾದೇವಿ ಗಲಗಲಿ, ಪೊಲೀಸ್ ಇನ್ಸ್ ಪೆಕ್ಟರ್ ಐ.ಪಿ.ಮೇದಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಗೀತಾ, ತಹಶೀಲ್ದಾರ್ ಕುಸುಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಯಲಕ್ಷ್ಮೀಬಾಯಿ, ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಮ್ತಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ದಮಯಂತಿ, ಪ್ರಮುಖರಾದ ಕೋಡಿ ಚಂದ್ರಶೇಖರ್, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರರಾದ ಪ್ರಕಾಶ್, ಅನಿಲ್ ಕುಮಾರ್, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಗಳು, ನಾನಾ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದು ಹಲವಾರು ಸಲಹೆ ನೀಡಿದರು.