ವಿದ್ಯುತ್ ಪ್ರಸರಣಾ ಮಾರ್ಗಗಳು ಹಾಗೂ ಉಪಕೇಂದ್ರಗಳ ಸ್ಥಾಪನೆ: ತ್ವರಿತ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು,ಆ.4: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿನ ವಿದ್ಯುತ್ ಪ್ರಸರಣಾ ಮಾರ್ಗಗಳು ಹಾಗೂ ಉಪಕೇಂದ್ರಗಳ ಸ್ಥಾಪನೆಗೆ ಇರುವ ಸಮಸ್ಯೆಗಳಿಗೆ ತ್ವರಿತವಾಗಿ ಕ್ರಮ ವಹಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಆನೇಕಲ್ ತಾಲೂಕು ಕುಂಬಾರಹಳ್ಳಿ ಗ್ರಾಮದಲ್ಲಿ 66/11 ಕೆ.ವಿ. ಹಾಗೂ ಮೈಲಸಂದ್ರ ಗ್ರಾಮದಲ್ಲಿ 440/220 ಕೆವಿ ವಿದ್ಯುತ್ ಕೇಂದ್ರಕ್ಕೆ ಸಂಪರ್ಕ ರಸ್ತೆಗಾಗಿ ಜಾಗ ಮಂಜೂರು ಮಾಡುವ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಸಂಬಂಧಪಟ್ಟವರಿಗೆ ಪರಿಹಾರ ಮಂಜೂರು ಮಾಡಿ ಭೂ ಸ್ವಾಧೀನ ಮಾಡಿಕೊಳ್ಳಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.
ಹುಸ್ಕೂರು ಗ್ರಾಮದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ ಈಗಾಗಲೇ ಗುರುತಿಸಿರುವ ಬದಲಿ ಜಾಗವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ ಒದಗಿಸುವಂತೆ ಅವರು ಸೂಚಿಸಿದರು. ಸೋಮನಹಳ್ಳಿ- ಮಾಲೂರಿನಲ್ಲಿ 220 ಕೆವಿ ವಿದ್ಯುತ್ ಪ್ರಸರಣ ಮಾರ್ಗದ ಕೆಲಸಗಳು ಕಳೆದ 10 ವರ್ಷಗಳಿಂದ ಬಾಕಿ ಉಳಿದಿದ್ದು, ಉಳಿದ ಕಾಮಗಾರಿಯನ್ನು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರಿಂದ ನಿಲ್ಲಿಸಲಾಗಿತ್ತು. ಈ ಸಂಬಂಧ ಸೆಷೆನ್ಸ್ ಕೋರ್ಟ್ ನಲ್ಲಿರುವ ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದರು.
ಸೊಂಡೆಕೊಪ್ಪದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಹಾಗೂ ಯರಂಡಹಳ್ಳಿ 220/66 ಕೆ.ವಿ ಇಪಿಐಪಿ ವಿದ್ಯುತ್ ಉಪಕೇಂದ್ರದಿಂದ ಹಾಲಿ ಇರುವ 66 ಕೆವಿ ಒಂಟಿ ವಿದ್ಯುತ್ ಮಾರ್ಗವನ್ನು ಜೋಡಿ ಮಾರ್ಗವಾಗಿ ಪರಿವರ್ತಿಸಲು ಕಾಮಗಾರಿಗೆ ಖಾಸಗಿ ಜಮೀನುಗಳ ಮಾಲೀಕರಿಂದ ತಡೆಯುಂಟಾಗಿದ್ದು, ಕಾಮಗಾರಿಯನ್ನು ಸ್ಥಗಿತಗೊಳಿಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರ ರಕ್ಷಣೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಬೆಂಗಳೂರು ನಗರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು 14 ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಯೋಜನೆ ಹಮ್ಮಿಕೊಂಡಿದ್ದು, ಇವುಗಳಿಗೆ ಭೂಮಿಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಗುರುತಿಸಲು ಒದಗಿಸುವ ವ್ಯವಸ್ಥೆಯನ್ನು ಮಾಡುವಂತೆ ಅವರು ಸೂಚಿಸಿದರು. ಹೂಡಿ-ಕೋಲಾರ ಮಾರ್ಗದಿಂದ ಹೊಸಕೋಟೆ ವಿದ್ಯುತ್ ಉಪಕೇಂದ್ರಕ್ಕೆ 220 ಜೋಡಿ ವಿದ್ಯುತ್ ಮಾರ್ಗ ನಿರ್ಮಿಸುವ ಕಾಮಗಾರಿಗೆ ಭೂ ಮಾಲೀಕರು ಅಡ್ಡಿಪಡಿಸಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆ ಮಧ್ಯಸ್ಥಿಕೆ ವಹಿಸಿ ಇತ್ಯರ್ಥಪಡಿಸಲು ಸಭೆಯಲ್ಲಿ ಮುಖ್ಯಮಂತ್ರಿಗಳು ಸೂಚಿಸಿದರು.
ಮಂಡೂರಿನಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ನಿರ್ಮಿಸುವ ಕಾಮಗಾರಿಗೆ ಹೊಸ ಬಡಾವಣೆಗಳ ಹಾಗೂ ಬಹುಮಹಡಿ ಕಟ್ಟಡಗಳ ಮಾಲೀಕರು ಅಡ್ಡಿಪಡಿಸಿದ್ದು, ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಪ್ರಕರಣಗಳನ್ನು ಕೂಡಲೇ ಇತ್ಯರ್ಥಪಡಿಸಿ, ಕಾಮಗಾರಿ ಪೂರ್ಣಗೊಳಿಸಲು ಅನುವು ಮಾಡಿಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳಿಗೆ ಸೂಚಿಸಿದರು. ತೂಬಗೆರೆ 66/11 ಕೆ.ವಿ ವಿದ್ಯುತ್ ಉಪಕೇಂದ್ರ 2ನೇ ಸಂಪರ್ಕ ವಿದ್ಯುತ್ ಮಾರ್ಗ ಕಲ್ಪಿಸುವ ಕಾಮಗಾರಿಯನ್ನು ಪೊಲೀಸ್ ಇಲಾಖೆಯ ರಕ್ಷಣೆ ಪಡೆದು ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
220/66 ಕೆ.ವಿ ಭೂಗತ ಕೇಬಲ್ ಅಳವಡಿಸಲು ಬಿಡದಿಯಿಂದ ಕುಂಬಳಗೋಡುವರೆಗೆ ಮೈಸೂರು ರಸ್ತೆಯಲ್ಲಿ ಕಾಮಗಾರಿಯನ್ನು ಕೈಗೊಳ್ಳಬೇಕಾಗಿದೆ. ಇತ್ತೀಚೆಗೆ ಮೈಸೂರು ರಸ್ತೆಯನ್ನು ಷಟ್ಪಥ ಮಾಡುವ ಪ್ರಸ್ತಾಪವಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ರಸ್ತೆಯ ಸರಹದ್ದನ್ನು ಗುರುತಿಸಿ ಕೊಡಬೇಕು. ಈ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿ ಗಳ ಅಪರ ಮುಖ್ಯ ಕಾರ್ಯದರ್ಶಿ ಇ. ವಿ.ರಮಣ ರೆಡ್ಡಿ, ಕ.ವಿ.ಪ್ರ.ನಿ.ನಿ ವ್ಯವಸ್ಥಾಪಕ ನಿರ್ದೇಶಕ ಜಾವೇದ್ ಅಖ್ತರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಗೃಹ ಹಾಗೂ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ , ಬಿ. ಬಿ. ಎಂ.ಪಿ. ಆಯುಕ್ತ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡ, ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ, ಮತ್ತಿತರರು ಭಾಗವಹಿಸಿದ್ದರು.







