ಜಿಲ್ಲಾಸ್ಪತ್ರೆಯನ್ನು ಸಾವಿರ ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ಪ್ರಸ್ತಾವ: ಶಾಸಕ ಸಿ.ಟಿ.ರವಿ
ಚಿಕ್ಕಮಗಳೂರು, ಆ.6: ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯನ್ನು ಸಾವಿರ ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.
ಸೋಮವಾರ ನಗರದ ಮಲ್ಲೇಗೌಡ ಸರಕಾರ ಜಿಲ್ಲಾಸ್ಪತ್ರೆಗೆ ಭೇಡಿನೀಡಿ ಕುಂದುಕೊರತೆಗಳನ್ನು ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯು 400 ಹಾಸಿಗೆ ಒಳಗೊಂಡಿದೆ. ಪ್ರತಿದಿನ 1200 ರಿಂದ 1500 ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ, ಹಾಸನ, ಮಂಗಳೂರು, ಬೆಂಗಳೂರಿಗೆ ಕಳಿಸಲಾಗುತ್ತಿದೆ. ಇದರಿಂದ ರೋಗಿಗಳಿಗೆ ತೊಂದರೆ ಆಗುತ್ತಿದೆ. ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದರಿಂದ ಮಾತ್ರ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.
ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಸಂದರ್ಭ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು 15 ದಿನಗಳಲ್ಲಿ ಜಿಲ್ಲೆಗೆ ನಾನೇ ಬರುತ್ತೇನೆ. ಆಗ ಆಸ್ಪತ್ರೆಯನ್ನು ಮೇಲ್ದರ್ಜೆರಿಸುವ ಸಂಬಂಧ ಘೋಷಣೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಶಿವಮೊಗ್ಗ, ಹಾಸನ, ಮಂಗಳೂರು ಸರಕಾರಿ ಆಸ್ಪತ್ರೆಗಳಲ್ಲಿ ಇರುವಂತಹ ಸೌಲಭ್ಯಗಳು ಇಲ್ಲಿಯೂ ಸಿಗುವಂತಾಗಬೇಕು ಎಂದು ಆಗ್ರಹಿಸಿದ ಅವರು, ಸಿಎಂ ಭರವಸೆ ಬಗ್ಗೆ ಇನ್ನು 15 ದಿನ ಕಾದುನೋಡಿ ನಂತರ ಹೋರಾಟದ ರೂಪುರೇಷೆ ಸಿದ್ಧಪಡಿಸುವುದಾಗಿ ತಿಳಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಸಮಸ್ಯೆ, ಸಿಬ್ಬಂದಿ ಕೊರತೆ ಇದೆ. ಕಟ್ಟಡವೂ ಹಳೆಯದಾಗಿದೆ. ಇದರಿಂದ ರೋಗಿಗಳು ಮತ್ತು ಸಿಬ್ಬಂದಿಗೆ ಕಾರ್ಯ ನಿರ್ವಹಿಸುಲು ತೊಂದರೆಯಾಗಿದೆ. ಈಗಿರುವ ಆಸ್ಪತ್ರೆಯೂ ನ್ಯಾಷನಲ್ ಹೆಲ್ತ್ ಮಿಷನ್ (ಎನ್.ಎಚ್.ಎಂ) ನಿಯಮದಂತೆ ಇಲ್ಲ. ಈ ಭಾಗದಲ್ಲಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದು ಅನಿವಾರ್ಯ ಎಂದರು
ಆಸ್ಪತ್ರೆಯಲ್ಲಿ ಕೆಲ ವೈದ್ಯರು ಬ್ರಾಡೆಂಡ್ ಔಷಧಗಳಿಗೆ ಹೊರಗಡೆಗೆ ಬರೆದು ಕೊಡುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಅನಿವಾರ್ಯ ಸಂದರ್ಭ ಹೊರತುಪಡಿಸಿ ಉಳಿದಂತೆ ಜನರಿಕ್ ಔಷಧ ಮಳಿಗೆಗೆ ಚೀಟಿ ಬರೆದುಕೊಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.