ದೇಶದಲ್ಲಿ ಎಲ್ಲೆಡೆ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲಾಗುತ್ತಿದೆ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಆ.7: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ಹಿಂಸೆ ಮತ್ತು ದೌರ್ಜನ್ಯ ನಡೆಸಲಾಗಿರುವ ಆಶ್ರಮದ ಉಸ್ತುವಾರಿ ನಡೆಸುತ್ತಿರುವ ಎನ್‌ಜಿಒ ಸಂಸ್ಥೆಗೆ ಆರ್ಥಿಕ ನೆರವು ನೀಡಿರುವುದಕ್ಕಾಗಿ ಸುಪ್ರೀಂಕೋರ್ಟ್ ಬಿಹಾರ ಸರಕಾರವನ್ನು ತರಾಟೆಗೆತ್ತಿಕೊಂಡಿದೆ. ಮುಝಾಫರ್‌ಪುರದ ಆಶ್ರಮಕ್ಕೆ ಆರ್ಥಿಕ ನೆರವು ನೀಡುತ್ತಿರುವವರು ಯಾರು , ಎನ್‌ಜಿಒ ಸಂಸ್ಥೆ ನಿರ್ವಹಿಸುತ್ತಿರುವ ಆಶ್ರಮವನ್ನು ಅಧಿಕಾರಿಗಳು ತಪಾಸಣೆ ಯಾಕೆ ನಡೆಸುತ್ತಿಲ್ಲ ಎಂದು ನ್ಯಾಯಾಲಯ ಸರಕಾರವನ್ನು ಪ್ರಶ್ನಿಸಿತು.
ದೇಶದಲ್ಲಿ ಮಹಿಳೆಯರ ವಿರುದ್ಧದ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ಎಲ್ಲೆಡೆ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲಾಗುತ್ತಿದೆ ಎಂದು ತಿಳಿಸಿತು. ದೇಶದಲ್ಲಿ ಪ್ರತೀ ಆರು ಗಂಟೆಗೆ ಒಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂಬ ರಾಷ್ಟ್ರೀಯ ಅಪರಾಧ ದಾಖಲಾತಿ ವಿಭಾಗದ ದತ್ತಾಂಶ ಮಾಹಿತಿಯನ್ನು ನ್ಯಾಯಾಲಯ ಉಲ್ಲೇಖಿಸಿತು.
ಮುಝಫರ್‌ಪುರ ಆಶ್ರಮದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯರಿಗೆ ಯಾವುದೇ ಪರಿಹಾರ ನೀಡಲಾಗಿಲ್ಲ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತರಲಾಯಿತು. ಕಳೆದ ವಾರ ಅತ್ಯಾಚಾರ ಪ್ರಕರಣದ ಸ್ವಯಂ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್, ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರವನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳದಿರುವ ಬಗ್ಗೆ ವಿವರಣೆ ನೀಡುವಂತೆ ಬಿಹಾರ ಸರಕಾರಕ್ಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿತ್ತು.







