ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ ವಿಚಾರ: ನ್ಯಾಯಾಂಗ ತನಿಖಾ ಆಯೋಗ ರಚಿಸಲು ಕೋರಿ ಪಿಐಎಲ್ ಸಲ್ಲಿಕೆ
ಬೆಂಗಳೂರು, ಆ.23: ಕೊಡಗಿನಲ್ಲಿ ಘಟಿಸಿದ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ವರದಿ ಹಾಗೂ ಶಿಫಾರಸು ಸಲ್ಲಿಸುವ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕೆಂಬ ಅರ್ಜಿಯೊಂದು ಸೋಮವಾರ ಹೈಕೋರ್ಟ್ ನ್ಯಾಯಪೀಠದ ಎದುರು ವಿಚಾರಣೆಗೆ ಬರುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯ ಜೆ.ಎಸ್.ವೀರುಪಾಕ್ಷಯ್ಯ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ. ಸೋಮವಾರ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠದಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಮಳೆಯಿಂದಾಗಿ ಕೊಡಗು ಜಿಲ್ಲೆಯ 32ಕ್ಕೂ ಹೆಚ್ಚು ಗ್ರಾಮಗಳಲ್ಲಿನ ಮನೆಗಳು, ಭೂಮಿ, ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ಹೀಗಾಗಿ, ನ್ಯಾಯಪೀಠವೇ ಕೊಡಗು ಜಿಲ್ಲೆಯ ವರದಿ ಹಾಗೂ ಶಿಫಾರಸು ಸಲ್ಲಿಸಲು ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ. ಈ ಅರ್ಜಿಯಲ್ಲಿ ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ.
Next Story





