ಬಸ್ಗಳ ನಡುವೆ ಅಪಫಾತ: ಕಾರವಾರ ಎಎಸ್ಸೈ ಸಹಿತ ನಾಲ್ವರು ಮೃತ್ಯು
15ಕ್ಕೂ ಅಧಿಕ ಮಂದಿಗೆ ಗಾಯ
ಶಿರಾ, ಆ.28: ಖಾಸಗಿ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ಸಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರವಾರ ಸಹಾಯಕ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ರೊಬ್ಬರ ಸಹಿತ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಕೆಎಸ್ಸಾರ್ಟಿಸಿ ಈಶಾನ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಸೀಬರ್ಡ್(ಖಾಸಗಿ) ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸೀಬರ್ಡ್ ಬಸ್ ಪ್ರಯಾಣಿಕರಾಗಿದ್ದ ಕಾರವಾರ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ ಸ್ಪೆಕ್ಟರ್ ಕೆ ರಮೇಶ್ (55), ಬೆಂಗಳೂರಿನ ನಿಖಿತಾ(27) ಹಾಗೂ ಇನ್ನೋರ್ವ ಮೃತಪಟ್ಟಿದ್ದರೆ, ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ಸಿನ ಹಿಂಬದಿಯ ಸೀಟಿನಲ್ಲಿದ್ದ ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿಲ್ಲ.
ಇಂದು ಮುಂಜಾನೆ 5:30ರ ಸುಮಾರಿಗೆ ಕೆಎಸ್ಸಾರ್ಟಿಸಿ ಬಸ್ಗೆ ಸೀಬರ್ಡ್ ಬಸ್ ಹಿಂದಿನಿಂಧ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಎರಡೂ ಬಸ್ಗಳಲ್ಲಿನ 15ರಷ್ಟು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಅವರನ್ನು ತುಮಕೂರು ಸರಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.