ಸರಕಾರ ಕಳುಹಿಸಿರುವ ಪ್ರಸ್ತಾವ ಪರಿಶೀಲನೆಯಲ್ಲಿದೆ: ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರಕಾರ
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ
ಬೆಂಗಳೂರು, ಆ.29: ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ಕುರಿತಂತೆ ರಾಜ್ಯ ಸರಕಾರ ಕಳುಹಿಸಿರುವ ಪ್ರಸ್ತಾವ ವಿವಿಧ ಹಂತಗಳಲ್ಲಿ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ಮನವಿ ವಿವಿಧ ಇಲಾಖೆಗಳ ಪರಿಶೀಲನೆಯ ಹಂತದಲ್ಲಿದ್ದು ಕೇಂದ್ರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ, ಈ ಕುರಿತು ಕೋರ್ಟ್‌ಗೆ ವಿವರಣೆ ನೀಡಲು ಇನ್ನಷ್ಟು ಕಾಲಾವಕಾಶ ಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ 2017ರ ಡಿಸೆಂಬರ್ 22ರಂದು ರಾಜ್ಯ ಅಲ್ಪಸಂಖ್ಯಾತ ಆಯೋಗವು ತಜ್ಞರ ಸಮಿತಿ ರಚನೆಗೆ ಆದೇಶಿಸಿದ್ದ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.





