ಸರಕಾರಿ ಶಾಲೆಗಳ ಸಬಲೀಕರಣ ಸಮಿತಿಯ ವರದಿ ಕಾಯ್ದೆಯಾಗಲಿ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು, ಆ.31: ಸರಕಾರಿ ಶಾಲೆಗಳ ಸಬಲೀಕರಣ ಸಮಿತಿಯ ವರದಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರಕಾರಕ್ಕೆ ಸಲ್ಲಿಸಿದ್ದು, ಇದನ್ನು ಕಾಯ್ಕೆಯಾಗಿಸಬೇಕಾದ ಅಗತ್ಯತೆಯಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.
2017ರ ಕನ್ನಡ ಭಾಷಾ ಕಾಯ್ದೆಯನ್ನು ಅನುಷ್ಠಾನಗೊಳಿಸುವಲ್ಲಿ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆಸಕ್ತಿ ವಹಿಸಿಲ್ಲ. ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವಲ್ಲಿ ಸರಕಾರಿ ಆದೇಶವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಸರಕಾರದ ಆದೇಶಕ್ಕೆ ಅಗೌರವ ತೋರಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ಗೆ ಪತ್ರ ಬರೆದಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಖಾಸಗಿ ಕ್ಷೇತ್ರಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ನಿಟ್ಟಿನಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ. ಈ ಶಿಫಾರಸುಗಳು ಕಾಯ್ದೆಯಾಗುವ ಸಂಬಂಧ 2017ರಲ್ಲಿ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಕಾಯ್ದೆ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸರಕಾರದ ಇಲಾಖೆಗಳ ಜಾಲ ತಾಣಗಳಲ್ಲಿ ಕನ್ನಡಕ್ಕೆ ಪ್ರಥಮ ಪ್ರಾಶಸ್ತ್ಯ ಕಲ್ಪಿಸುವ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಮಾಹಿತಿ ತಂತ್ರಜ್ಞಾನದ ಇಂದಿನ ಯುಗದಲ್ಲಿ ಕನ್ನಡದ ಅಸ್ತಿತ್ವಕ್ಕೆ ಈ ವರದಿ ಅತ್ಯಂತ ಪೂರಕವಾಗಿದ್ದು, ಇದನ್ನು ಅನುಷ್ಠಾನಗೊಳಿಸುವಲ್ಲಿ ಇ-ಆಡಳಿತ ಇಲಾಖೆ ಮುಖೇನ ಎಲ್ಲ ಇಲಾಖೆಗಳು ಬದ್ಧತೆಯನ್ನು ತೋರಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.







