ಪೌರಕಾರ್ಮಿಕರ ಖಾಯಂ ನೇಮಕಾತಿ ಬಗ್ಗೆ ಸಿಎಂ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ: ಸಂಪತ್‌ರಾಜ್

ಬೆಂಗಳೂರು, ಸೆ.1: ಪೌರ ಕಾರ್ಮಿಕರ ನೇಮಕಾತಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ತ್ವರಿತವಾಗಿ ಚರ್ಚಿಸಲಾಗುವುದು ಎಂದು ಬಿಬಿಎಂಪಿ ಮೇಯರ್ ಆರ್.ಸಂಪತ್ ರಾಜ್ ತಿಳಿಸಿದ್ದಾರೆ.
ಶನಿವಾರ ಬಿಬಿಎಂಪಿ ಕೇಂದ್ರ ಕಚೇರಿಯ ಗಾಜಿನ ಮನೆಯಲ್ಲಿ ಆಯೋಜಿಸಿದ್ದ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿರು. ಪ್ರಸ್ತುತ ಸಾಲಿನಲ್ಲಿಯೇ ನಾಲ್ಕು ಸಾವಿರ ಪೌರ ಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಅಧಿಕಾರಿಗಳು ಪತ್ರ ವ್ಯವಹಾರಕ್ಕೆ ಮುಂದಾಗಿದ್ದು, ತ್ವರಿತವಾಗಿ ನೇಮಕ ಮಾಡಿಕೊಳ್ಳಲಾಗುವುದು. ಹಾಗೂ ಪೌರಕಾರ್ಮಿಕರ ಇತರೆ ಸೌಲಭ್ಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ತಿಳಿಸಿದರು.
ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಅಂಬೇಡ್ಕರ್ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರಬೇಕು. ತಾವು ಮಾಡುವ ಕೆಲಸಗಳಲ್ಲಿ ಪ್ರಾಮಾಣಿಕತೆಯಿಂದಿರುವುದೆ ಅಂಬೇಡ್ಕರ್‌ಗೆ ಮಾಡುವ ದೊಡ್ಡ ಗೌರವವಾಗಿದೆ ಎಂದು ತಿಳಿಸಿದರು.
ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಸಂವಿಧಾನ ರಚನೆ ಮಾಡಿದ್ದಾರೆ. ಹೀಗಾಗಿ ಸಂವಿಧಾನದ ಮೂಲ ಆಶಯಗಳು ಸಂಪೂರ್ಣವಾಗಿ ಜಾರಿಯಾದರೆ, ಎಲ್ಲರಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಸಿಗುವುದರಲ್ಲಿ ಯಾವುದೆ ಅನುಮಾನವಿಲ್ಲವೆಂದು ಅವರು ಹೇಳಿದರು.
ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಮಾತನಾಡಿ, ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡಾಗ ಮಾತ್ರ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಅವರು ರಚಿಸಿರುವ ಸಂವಿಧಾನವನ್ನು ಎಲ್ಲರೂ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.
ಪೌರ ಕಾರ್ಮಿಕ ಖಾಯಂ ನೇಮಕಾತಿ ಮಾಡಿಕೊಳ್ಳುವಂತೆ ಸರಕಾರಿ ಆದೇಶ ನೀಡಿ ಹಲವು ದಿನಗಳಾಗಿವೆ. ಆದರೆ, ಇದುವರೆಗೂ ಯಾವುದೇ ನೇಮಕಾತಿ ಆಗಿಲ್ಲ. ಇನ್ನೂ 20 ಸಾವಿರಕ್ಕೂ ಅಧಿಕ ಮಂದಿ ಗುತ್ತಿಗೆ ಕಾರ್ಮಿಕರಿದ್ದಾರೆ. ಇವರನ್ನು ತ್ವರಿತವಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಬೃಹತ್ ಮೆರವಣಿಗೆ: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಸಾವಿರಾರು ಕಾರ್ಮಿಕರು, ನಗರದ ಪುರಭವನದಿಂದ ಬಿಬಿಎಂಪಿ ಕೇಂದ್ರ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಕಾರ್ಯಕ್ರಮದಲ್ಲಿ 324 ಪೌರ ಕಾರ್ಮಿಕರಿಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು. ಆಡಳಿತ ಪಕ್ಷದ ಎನ್.ಶಿವರಾಜ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ ಮತ್ತಿತರರಿದ್ದರು.







