ಉಡುಪಿ : ವಿಶ್ವ ಹೃದಯ ದಿನದ ಅಂಗವಾಗಿ ಸೆ.23ರಂದು ಬೃಹತ್ ಜಾಥಾ
ಉಡುಪಿ, ಸೆ.21: ಆದರ್ಶ ಆಸ್ಪತ್ರೆ ಉಡುಪಿ ಮತ್ತು ಪೂರ್ಣಪ್ರಜ್ಞ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಸೆ.23ರ ರವಿವಾರ ಬೆಳಗ್ಗೆ 8:00ರಿಂದ 11:00ರವರೆಗೆ ಜಾಥ ಹಾಗೂ ಹೃದ್ರೋಗ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಹೃದ್ರೋಗದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಬೃಹತ್ ಕಾಲ್ನಡಿಗೆ ಜಾಥಾವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 8:00ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಹಾಗೂ ಅದಮಾರು ಮಠ ಕಿರಿಯ ಯತಿ ಶ್ರೀಈಶ ಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನದ ಬಳಿಕ ಜಾಥಕ್ಕೆ ಚಾಲನೆ ನೀಡಲಿರುವರು.
ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಶ್ರೀಕಾಂತ್ ಕೆ. ನೇತೃತ್ವದಲ್ಲಿ ಹೃದ್ರೋಗದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಜಾಥಾದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಹಿರಿಯ ನರರೋಗ ಶಸ್ತ್ರ ಚಿಕಿತ್ಸಾ ತಜ್ಞ ಪ್ರೊ.ಎ.ರಾಜಾ ಅಲ್ಲದೇ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ತಿಳಿಸಿದ್ದಾರೆ.





