ಅಸ್ಪೃಶ್ಯತೆ ವಿರುದ್ಧ ಹಾಗೂ ಸಮಾನತೆಗಾಗಿ ಗಾಂಧೀಜಿ ಹೋರಾಟ ನಡೆಸಿದರು: ಸಚಿವ ಜಿ.ಟಿ.ದೇವೇಗೌಡ
ಮೈಸೂರು,ಅ.2: ಮಹಾತ್ಮ ಗಾಂಧೀಜಿ ಬ್ರಿಟಿಷರ ವಿರುದ್ಧ ಅಹಿಂಸಾತ್ಮಕ ಹೋರಾಟ ನಡೆಸಿ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಅಸ್ಪೃಶ್ಯತೆ ವಿರುದ್ಧ ಹಾಗೂ ಸಮಾನತೆಗಾಗಿ ಹೋರಾಟ ನಡೆಸಿದರು. ಹಾಗಾಗಿ ಇಂದಿನ ಸಮೂಹ ಗಾಂಧೀಜಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಯುವಕರಿಗೆ ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕರೆ ನೀಡಿದರು.
ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚಾರಣೆ ಹಿನ್ನಲೆಯಲ್ಲಿ ನಗರದ ಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಮಂಗಳವಾರ ಸಚಿವ ಜಿ.ಟಿ.ದೇವೇಗೌಡ ಮಾಲಾರ್ಪಣೆ ಮಾಡಿದರು. ನಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ರಂಗಾಚಾರ್ಲು ಸ್ಮಾರಕ ಪುರಭವನದಲ್ಲಿ ಆಯೋಜಿಸಲಾಗಿದ್ದ ಪ್ರಾರ್ಥನಾ ಸಭೆಗೆ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಬ್ರಿಟಿಷರ ವಿರುದ್ಧ ಅಹಿಂಸಾತ್ಮಕ ಹೋರಾಟ ನಡೆಸಿ ಭಾರತಕ್ಕೆ ಸ್ವಾತಂತ್ಯ ತಂದುಕೊಟ್ಟರು. ಅಸ್ಪೃಶ್ಯತೆ ವಿರುದ್ಧ ಹಾಗೂ ಸಮಾನತೆಗಾಗಿ ಹೋರಾಟ ನಡೆಸಿದರು. ಇಂದಿನ ಯುವ ಸಮೂಹ ಗಾಂಧೀಜಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಗಾಂಧೀಜಿ ಅವರ ಅಹಿಂಸಾತ್ಮಕ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಿಸಿರುವ ಸಾಕ್ಷ್ಯಚಿತ್ರ ಈ ವೇಳೆ ಪ್ರದರ್ಶಿಸಲಾಯಿತು. ಹಾಡುಗಳ ಮೂಲಕ ಮಹಾತ್ಮ ಗಾಂಧೀಜಿಗೆ ಗೌರವ ಸಮರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯಿಮಾ ಸುಲ್ತಾನ್ ನಜೀರ್ ಅಹಮದ್, ನಗರಪಾಲಿಕೆ ಆಯುಕ್ತ ಜಗದೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.