ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಪ.ಪಂ.ಗಳಿಗೆ ಅ.28ಕ್ಕೆ ಚುನಾವಣೆ ಘೋಷಣೆ
ಬೆಂಗಳೂರು, ಅ.3: ಕೊಡಗು ಜಿಲ್ಲೆ ಸೋಮವಾರಪೇಟೆ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯತ್ ಸೇರಿದಂತೆ ಅವಧಿ ಮುಕ್ತಾಯಗೊಂಡಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳಿಗೆ ಅ.28ರ ರವಿವಾರ ಚುನಾವಣೆ ಘೋಷಣೆಯಾಗಿದೆ.
ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಆಗಸ್ಟ್ 16ರಂದು ಕೊಡಗು ಜಿಲ್ಲಾಧಿಕಾರಿ ಪತ್ರ ಬರೆದು ಚುನಾವಣೆ ಮುಂದೂಡಲು ಕೋರಿದ್ದು, ಮೇಲ್ಕಂಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲಾಗಿತ್ತು. ಇದೀಗ ಆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಿಸಲಾಗಿದೆ. ಸೋಮವಾರಪೇಟೆ ಪ.ಪಂ., ವಿರಾಜಪೇಟೆ ಪ.ಪಂ., ಕುಶಾಲನಗರ ಪ.ಪಂ.ಎಲ್ಲ ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.
ಅಧಿಸೂಚನೆ: ಅ.16ಕ್ಕೆ ಆಯಾ ಜಿಲ್ಲಾಧಿಕಾರಿಗಳು ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅ.16 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಅ.17ಕ್ಕೆ ನಾಮಪತ್ರ ಪರಿಶೀಲನೆ, ಅ.20ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ.
ಅ.28ರ ರವಿವಾರ ಬೆಳಗ್ಗೆ 7ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಅ.31ರ ಬುಧವಾರ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ಚುನಾವಣೆ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಅ.3ರಿಂದ ಅ.31ರ ವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.