ವಕ್ಫ್ ಮಂಡಳಿ ಆಸ್ತಿ ಕಬಳಿಕೆ: ಖುದ್ದು ಹಾಜರಾಗಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಆದೇಶ

ಬೆಂಗಳೂರು, ಅ.3: ವಕ್ಫ್ ಮಂಡಳಿ ಆಸ್ತಿ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಂದಿನ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಇನ್ನೂ ಮಂಡಿಸದೇ ಇರುವುದಕ್ಕೆ ಖುದ್ದು ಹಾಜರಾಗಿ ವಿವರಣೆ ನೀಡಿ ಎಂದು ರಾಜ್ಯ ಅಲ್ಪಸಂಖ್ಯಾತರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಮಾಜಿ ಸಚಿವ ಎಸ್.ಕೆ.ಕಾಂತಾ ಅವರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ವರದಿಯನ್ನು 2016ರ ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿತ್ತು. ಆದರೂ ಇನ್ನೂ ಸಲ್ಲಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಪೀಠ, ಯಾರು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂದು ಸರಕಾರದ ಪರ ವಕೀಲರನ್ನು ಪ್ರಶ್ನಿಸಿತಲ್ಲದೆ, ಮುಂದಿನ ವಿಚಾರಣೆ ವೇಳೆಗೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ನಿರ್ದೇಶಿಸಿತು. ವಿಚಾರಣೆಯನ್ನು ಅ. 9ಕ್ಕೆ ಮುಂದೂಡಿದೆ.





