ಯುವ ಕಲಾ ಪ್ರತಿಭೆಗಳಿಗೆ ಪ್ರೋತ್ಸಾಹ ದೊರಕಲಿ: ಶಿವಾನಂದ ಕಾಪಶಿ

ಉಡುಪಿ, ಅ.22: ಯುವ ಪ್ರತಿಭೆಗಳು ತಮ್ಮ ಕಲಾ ಪ್ರದರ್ಶನವನ್ನು ಪ್ರದರ್ಶಿಸಲು ಸೂಕ್ತ ಪ್ರೋತ್ಸಾಹ ನೀಡುವ ವಾತಾವರಣ ಎಲ್ಲೆಡೆ ನಿರ್ಮಾಣವಾಗಬೇಕು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಹೇಳಿದ್ದಾರೆ.
ಸೋಮವಾರ ಕಟಪಾಡಿ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಅವರಲ್ಲಿರುವ ಕಲೆಯನ್ನು ಪ್ರೋತ್ಸಾಹಿಸ ಬೇಕು. ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಯುವ ಜನತೆಯ ಮೂಲಕ ಮುಂದಿನ ಪೀಳಿಗೆಗೆ ತಲುಪಿಸಬೇಕು. ಉಡುಪಿ ಜಿಲ್ಲೆ ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಇಲ್ಲಿನ ವಿಶಿಷ್ಠ ಕಲೆಗಳನ್ನು ಉಳಿಸಿ, ಬೆಳೆಸಲು ಯುವ ಪ್ರತಿಭೆಗಳಿಗೆ ಸೂಕ್ತ ವಾತಾವರಣ ನಿರ್ಮಾಣ ಮಾಡಬೇಕು ಎಂದು ಕಾಪಶಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಐರೋಡಿ ರಾಜಶೇಖರ ಹೆಬ್ಬಾರ್ ಮಾತನಾಡಿ, ಇಂದಿನ ಯಾಂತ್ರೀಕೃತ ಜೀವನದಲ್ಲಿ ಮುಳುಗಿರುವ ಜನತೆಗೆ ಕಲೆ ಮತ್ತು ಸಂಸ್ಕೃತಿಯಿಂದ ಮಾತ್ರ ನೆಮ್ಮದಿ ಸಿಗಲಿದೆ. ಮಕ್ಕಳನ್ನು ಬಾಲ್ಯದಿಂದಲೇ ಯಾವುದಾದರೊಂದು ಕಲೆಯಲ್ಲಿ ತೊಡಗಿಸಿದರೆ ಅಂತಹ ಮಕ್ಕಳು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವರು ಎಂದು ಹೇಳಿದರು.
ಎಸ್.ವಿ.ಎಸ್ ಪ್ರೌಢಶಾಲೆಯ ಸಂಚಾಲಕ ಕೆ. ವಸಂತ ಮಾಧವ ಭಟ್, ಮುಖ್ಯಶಿಕ್ಷಕ ಸುಬ್ರಹ್ಮಣ್ಯ ತಂತ್ರಿ, ಕೆವಿಎಸ್‌ಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಸತ್ಯ ರಂಜನಿ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್. ಚಂದ್ರಶೇಖರ್ ಸ್ವಾಗತಿಸಿದರು. ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿ ಪ್ರವೀಣ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಕಲಾವಿದರಿಂದ, ಕರ್ನಾಟಕ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ವಾದ್ಯ ಸಂಗೀತ, ಸುಗಮ ಸಂಗೀತ, ಜನಪದ ಸಂಗೀತ, ಜನಪದ ಕಲಾ ಪ್ರದರ್ಶನ, ಕರಗ, ಕೋಲಾಟ, ಕಂಸಾಳೆ, ಸಮೂಹ ನೃತ್ಯ/ನೃತ್ಯ ರೂಪಕ, ಕಥಾ ಕೀರ್ತನ ಮತ್ತು ನಾಟಕ ಪ್ರದರ್ಶನ ನಡೆಯಿತು.







