ಪ.ಪಂ.ಚುನಾವಣೆ: ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಸೂಚನೆ
ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಮಡಿಕೇರಿ, ಅ.22: ಜಿಲ್ಲೆಯ ಮೂರು ಪಟ್ಟಣ ಪಂ.ಗಳಿಗೆ ಅ.28 ರಂದು ಮತದಾನ ನಡೆಯಲಿದ್ದು, ಮತಗಟ್ಟೆ ಅಧಿಕಾರಿಗಳು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಪಟ್ಟಣ ಪಂಚಾಯತ್ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪಟ್ಟಣ ಪಂ. ಚುನಾವಣೆಯಲ್ಲಿ ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೇಟ್ ಯೂನಿಟ್ ವಿದ್ಯುನ್ಮಾನ ಯಂತ್ರಗಳನ್ನು ಬಳಸಲಾಗುತ್ತಿದ್ದು, ವ್ಯವಸ್ಥಿತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಉದಾಸೀನ ಮನೋಭಾವ ತೋರದೆ, ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಮಾತನಾಡಿ, ಟೆಂಡರ್ ವೋಟ್ ಆಗದಂತೆ ನೋಡಿಕೊಳ್ಳಬೇಕು. ಮತಗಟ್ಟೆ ಅಧಿಕಾರಿಗಳು ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಮಾತನಾಡಿ ಪಿ.ಆರ್.ಒ., ಎ.ಪಿ.ಆರ್.ಒ, ಮೊದಲನೇ, ಎರಡನೇ ಮತ್ತು ಮೂರನೇ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದು, ಎಲ್ಲಾ ಹಂತದ ಅಧಿಕಾರಿಗಳು ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸುವಂತೆ ಅವರು ತಿಳಿಸಿದರು.
ಚುನಾವಣಾ ತರಬೇತುದಾರರಾದ ಕೆ.ಜೆ.ದಿವಾಕರ ಅವರು ವಿದ್ಯುನ್ಮಾನ ಮತಯಂತ್ರ ಬಳಸುವುದು, ಚುನಾವಣಾ ಕರ್ತವ್ಯ ನಿರ್ವಹಣೆ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು.







