ಮರಳು ಸಮಸ್ಯೆ: ಅ. 25ರಿಂದ ಅನಿರ್ಧಿಷ್ಟಾವಧಿ ಧರಣಿ
ಉಡುಪಿ, ಅ.24: ಜಿಲ್ಲೆಯಲ್ಲಿ ಮರಳುಗಾರಿಕೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಧೋರಣೆಯ ವಿರುದ್ಧ ಜಿಲ್ಲೆಯ ಶಾಸಕರ, ಜನಪ್ರತಿನಿಧಿಗಳ ನೇತೃತ್ವದಲ್ಲಿ ಮರಳು ಹೋರಾಟ ಸಮಿತಿ ನಡೆಸಿರುವ ಹೋರಾಟ ತೀವ್ರ ಗೊಂಡಿದ್ದು, ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಲಿದೆ.
ಮರಳುಗಾರಿಕೆ ಹಾಗೂ ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಮಿಕರು ನಡೆಸುವ ಈ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿ ಗಳು ಭಾಗವಹಿಸಲಿದ್ದಾರೆ. ಈ ಧರಣಿಯಲ್ಲಿ ಜನರ ಸಮಸ್ಯೆಗಳನ್ನು ಈಡೇರಿಸಲು ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಬೇಕೆಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಮನವಿ ಮಾಡಿದ್ದಾರೆ.
ಮರಳು ತೆಗೆಯುವ ವಿಚಾರವಾಗಿ ಮುಖ್ಯಮಂತ್ರಿಗಳ ಆದೇಶವಿದ್ದರೂ ಜಿಲ್ಲಾಧಿಕಾರಿಗಳು ಆದೇಶವನ್ನು ಪಾಲಿಸುತ್ತಿಲ್ಲ. ಸರಕಾರದ ಆದೇಶಕ್ಕೆ ಉಡುಪಿ ಯಲ್ಲಿ ಬೆಲೆ ಇಲ್ಲದಂತಾಗಿದೆ. ಹೀಗಾಗಿ ಜನರ ಪರವಾಗಿ ನಾವು ಹೋರಾಟ ನಡೆಸಲು ಇಚ್ಚಿಸಿದ್ದೇವೆ. ಕರಾವಳಿಯ 7000ಕ್ಕೂ ಅಧಿಕ ಬಡಜನರ ಮನೆಗಳು ಮರಳು ಸಮಸ್ಯೆಯಿಂದಾಗಿ ಸ್ಥಗಿತಗೊಂಡಿವೆ ಎಂದು ರಘುಪತಿ ಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೋಟ ಹೇಳಿಕೆ: ಜಿಲ್ಲೆಯ ಮರಳುಗಾರಿಕೆ ಸಮಸ್ಯೆ ಬಗ್ಗೆ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ಪೂರ್ಣ ಬೆಂಬಲ ಇದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ತಾನು ಸೊರಬ ಕ್ಷೇತ್ರದ ಶಿವಮೊಗ್ಗ ಲೋಕಸಭಾ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿದ್ದು, 26ರಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಲಾರಿ ಮಾಲಕರ ಬೆಂಬಲ: ಮರಳುಗಾರಿಕೆಯನ್ನು ಆರಂಭಿಸಬೇಕೆಂದು ಆಗ್ರಹಿಸಿ ಮರಳು ಹೋರಾಟ ಸಮಿತಿ, ವಿವಿಧ ಸಂಘಟನೆಗಳ ಸಹಯೋಗ ದೊಂದಿಗೆ ಅ.25ರಿಂದ ಪ್ರಾರಂಭಿಸಲಿರುವ ಅಹೋರಾತ್ರಿ ಧರಣಿಗೆ ಉಡುಪಿ ಜಿಲ್ಲಾ ಲಾರಿ ಮಾಲಕರ ಸಂಘಟನೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸು ತ್ತದೆ ಎಂದು ಸಂಘದ ಅಧ್ಯಕ್ಷ ಪ್ರವೀಣ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಬೆಂಬಲ: ಜಿಲ್ಲೆಯಲ್ಲಿ ಮರಳುಗಾರಿಕೆಯನ್ನು ಕೂಡಲೇ ಪ್ರಾರಂಭಿಸುವಂತೆ ಆಗ್ರಹಿಸಿ ಜಿಲ್ಲೆಯ ವಿವಿಧ ಸಂಘಟನೆಗಳು, ಜನಪ್ರತಿನಿಧಿ ಗಳು ಪಕ್ಷ ಬೇಧ ಮರೆತು ನಾಳೆಯಿಂದ ನಡೆಸುವ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಭಾರತೀಯ ಜನತಾ ಪಾರ್ಟಿ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ಅವರು ಕರೆ ನೀಡಿದ್ದಾರೆ.







