ಮಂಗಳೂರು: ಆರೋಗ್ಯ ಇಲಾಖೆ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ

ಮಂಗಳೂರು, ಅ.25: ದೇಶದ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳ ಒಕ್ಕೂಟದ ಕರೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳ ಒಕ್ಕೂಟದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಶ್ರ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಎಲ್ಲ ಗುತ್ತಿಗೆ ನೌಕರರಿಗೆ ನಿವೃತ್ತಿ ವಯಸ್ಸಿನವರೆಗೂ ಸೇವಾ ಭದ್ರತೆ ನೀಡಬೇಕು. ಅಲ್ಲದೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹೊರಗುತ್ತಿಗೆ ವ್ಯವಸ್ಥೆಯನ್ನು ಸಂಪೂರ್ಣ ರದ್ದುಪಡಿಸಬೇಕು. ವೇತನವನ್ನು ನೇರವಾಗಿ ಸಿಬ್ಬಂದಿ ಖಾತೆಗೆ ವರ್ಗಾಯಿಸಬೇಕು. ವೇತನ ಮತ್ತು ಭತ್ತೆಗಳನ್ನು ಹಾಗೂ ವೇತನ ಶ್ರೇಣಿಯನ್ನು ನೀಡಲು ಹರಿಯಾಣ ಸರಕಾರದ ಮಾದರಿಯಲ್ಲಿ ಸಮಗ್ರ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೆ ತರಬೇಕು. ಕಾನೂನು ತೊಡಕುಗಳನ್ನು ನಿವಾರಿಸಲು ಸಂಸತ್‌ನಲ್ಲಿ ನಿರ್ಣಯ ಕೈಗೊಂಡು ಸಿಬ್ಬಂದಿ ಕಾಯಮಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಮುಖಂಡ ಅಜಯ್ ಮಾತನಾಡಿ, ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಮೂವತ್ತು ಸಾವಿರಕ್ಕೂ ಅಧಿಕ ಮಂದಿ ಗುತ್ತಿಗೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಾರಿಗೂ ಸೇವಾ ಭದ್ರತೆ ಇಲ್ಲದಿರುವುದರಿಂದ ಸಮಸ್ಯೆಯಾಗುತ್ತಿದೆ. ಆದ್ದರಿಂದ ಗುತ್ತಿಗೆ ನೌಕರರ ವೇದಿಕೆ ಆಶ್ರಯದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆಯನ್ನು ಬಲಗೊಳಿಸಲು ಹಾಗೂ ಗುತ್ತಿಗೆ ನೌಕರರಿಗೆ ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡಬೇಕೆಂಬ ಹಕ್ಕೊತ್ತಾಯ ಮುಂದಿಟ್ಟುಕೊಂಡು ಈ ಮುಷ್ಕರ ನಡೆಸಲಾಗುತ್ತಿದೆ ಎಂದು ಹೇಳಿದರು.
ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಕ್ಕೂಟದ ಸದಸ್ಯರಾದ ಪುಷ್ಪಲತಾ, ಡಾ.ಪ್ರಕಾಶ್, ರೇಣುಕಾ ಮುಂತಾದವು ಪ್ರತಿಭಟನೆಯಲ್ಲಿ ಮಾತನಾಡಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ಹೋರಾಟಗಾರರು ಮನವಿ ಸಲ್ಲಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯಲ್ಲಿ ವ್ಯತ್ಯಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸುಮಾರು 450ಕ್ಕೂ ಹೆಚ್ಚು ವೈದ್ಯಕೀಯ ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಂಡ ಕಾರಣಕ್ಕೆ ಗುರುವಾರ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಜಿಲ್ಲೆಯ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರೆಕಾಲಿಕ ವೈದ್ಯರು ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಭಾಗದ ರೋಗಿಗಳು ಖಾಸಗಿ ಕ್ಲಿನಿಕ್‌ಗಳ ಮೊರೆ ಹೋಗಬೇಕಾಯಿತು.







