ನಕ್ಸಲ್ ಬಾಧಿತ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ: ಚಿಕ್ಕಮಗಳೂರು ಡಿಸಿ ಶ್ರೀರಂಗಯ್ಯ

ಚಿಕ್ಕಮಗಳೂರು, ಅ.25: ಬಹುದೂರದ ಹಾಗೂ ಒಳನಾಡು ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಕ್ಸಲ್ ಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಕ್ಸಲ್ ಬಾಧಿತ ತಾಲೂಕುಗಳಾದ ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ದೂರದ ಒಳನಾಡಿನ ಜನಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೇಕು. ಈಗಾಗಲೇ ಕೈಗೊಂಡಿರುವ ಕಾಮಗಾರಿಗಳು ತ್ವರಿತ ಗತಿಯಲ್ಲಿ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ದೂರದ ಒಳನಾಡಿನ ಪ್ರದೇಶಗಳಲ್ಲಿ ವಾಸಿಸುವ ಮನೆಗಳಿಗೆ ವಿದ್ಯುಚ್ಚಕ್ತಿ ಸೌಲಭ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು, ದೀನದಯಾಳ್ ವಿದ್ಯುದೀಕರಣ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಈ ಭಾಗದ ಜನಸಾಮಾನ್ಯರಿಗೆ ವ್ಯವಸ್ಥಿತವಾಗಿ ಆಹಾರ ಧಾನ್ಯಗಳ ಪೂರೈಕೆ ಆಗಬೇಕು ಅಗತ್ಯವಿದ್ದಲ್ಲಿ ಸಂಚಾರಿ ನ್ಯಾಯಬೆಲೆ ಅಂಗಡಿ ತೆರೆಯಬೇಕೆಂದರು.
ದೂರದ ಒಳನಾಡಿನ ಪ್ರದೇಶದ ತುಂಬಾ ಹಾಳಾಗಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಅಗತ್ಯವಿರುವ ಕಡೆ ತೂಗು ಸೇತುವೆ ನಿರ್ಮಿಸಬೇಕು. ಜನಸಾಮಾನ್ಯರ ಅಗತ್ಯಕ್ಕನುಗುಣವಾಗಿ ಬಸ್ ಸೌಕರ್ಯವನ್ನು ಕಲ್ಪಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸಿಬ್ಬಂದಿ ವರ್ಗದವರ ಕೊರತೆಯಾಗದಂತೆ ಕ್ರಮ ವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಪ್ರಭಾರ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.







