ಸರ್ದಾರ್ ಪಟೇಲ್ ಜನ್ಮದಿನದ ಪ್ರಯುಕ್ತ ಅ.31ರಂದು ಏಕತಾ ಓಟ: ಡಿ.ವಿ.ಸದಾನಂದಗೌಡ

ಬೆಂಗಳೂರು, ಅ.30: ಕೇಂದ್ರದ ಮಾಜಿ ಗೃಹ ಸಚಿವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಅಂಗವಾಗಿ ಬುಧವಾರ(ಅ.31ರಂದು) ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಏಕತಾ ಓಟವನ್ನು ಆಯೋಜಿಸುವ ಮೂಲಕ ಯುವ ಸಮೂಹಕ್ಕೆ ಪಟೇಲ್ ಹಾಗೂ ಅವರ ಕೊಡುಗೆಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಮಂಗಳವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾಳೆ ದೇಶದಾದ್ಯಂತ ಹಾಗೂ ನಮ್ಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಏಕತಾ ಓಟ ನಡೆಯಲಿದೆ. ಬೆಂಗಳೂರು ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಮಾನ್ಯತಾ ಟೆಕ್ ಪಾರ್ಕ್, ಕೇಂದ್ರ ಲೋಕಸಭಾ ಕ್ಷೇತ್ರದ ಕಬ್ಬನ್‌ಪಾರ್ಕ್ ಮೆಟ್ರೋ ನಿಲ್ದಾಣ ಹಾಗೂ ದಕ್ಷಿಣ ಲೋಕಸಭಾ ಕ್ಷೇತ್ರದ ಶಾಲಿನಿ ಮೈದಾನದಿಂದ ಬೆಳಗ್ಗೆ 8 ಗಂಟೆಗೆ ಏಕತಾ ಆರಂಭಗೊಳ್ಳಲಿದ್ದು, ಅದರಲ್ಲಿ ಆಯಾ ಕ್ಷೇತ್ರದ ಸಂಸದರು ಭಾಗವಹಿಸಲಿದ್ದಾರೆ. ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಅನಂತ್‌ಕುಮಾರ್ ಪರವಾಗಿ ಮಾಜಿ ಡಿಸಿಎಂ ಆರ್.ಅಶೋಕ್ ಭಾಗವಹಿಸಲಿದ್ದಾರೆ ಎಂದು ಅವರು ವಿವರಣೆ ನೀಡಿದರು.
ಪಕ್ಷಭೇದವಿಲ್ಲದೆ ಸುಮಾರು ಐದು ಸಾವಿರ ಜನ ರಾಷ್ಟ್ರಧ್ವಜವನ್ನು ಹಿಡಿದು ನಾಳೆ ನಡೆಯುವ ಓಟದಲ್ಲಿ ಭಾಗವಹಿಸಲಿದ್ದಾರೆ. ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಕೆಲಸ ಈ ಏಕತಾ ಓಟದ ಮೂಲಕ ಮಾಡಲಾಗುವುದು. ಸರ್ದಾರ್ ಪಟೇಲ್ ಅವರ ಪ್ರತಿಮೆಯ ಪ್ರತಿಕೃತಿ ಜೊತೆಗೆ ದೇಶ ಭಕ್ತಿ ಹಾಡುಗಳು, ಪಟೇಲ್ ಅವರ ವಿಚಾರಗಳನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಅವರು ಹೇಳಿದರು.
ಅನಂತ್ ಕುಮಾರ್ ಆರೋಗ್ಯದಲ್ಲಿ ಸುಧಾರಣೆ
ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ. ವಿದೇಶದಿಂದ ಹಿಂದಿರುಗಿದ ಬಳಿಕ ಅವರು ನಗರದ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್, ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ನಾನು ಆಸ್ಪತ್ರೆಗೆ ಭೇಟಿ ನೀಡಿ, ಅನಂತ್‌ಕುಮಾರ್ ಆರೋಗ್ಯವನ್ನು ವಿಚಾರಿಸಿದ್ದೇವೆ. ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿರುವುದರಿಂದ, ಆಸ್ಪತ್ರೆಯಲ್ಲಿ ಹೆಚ್ಚಾಗಿ ಅತಿಥಿಗಳ ಭೇಟಿಗೆ ಅವಕಾಶ ನೀಡುತ್ತಿಲ್ಲ.
-ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ







